ಬಳ್ಳಾರಿ : ಯಾದಗಿರಿಯ ಜಿಲ್ಲೆಯ ಗುರುಮಿಠ್ಕಲ್‌ನ ಅಲೆಮಾರಿ ಬುಡ್ಗ ಜಂಗಮ ಸಮಾಜದ ಇಬ್ಬರ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದಂತೆ ಅನುಮಾನ ಎಡೆಮಾಡಿಕೊಟ್ಟಿದ್ದು ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ರಾಜ್ಯ ಎಸ್‌ಸಿ, ಎಸ್‌ಟಿ ಅಲೆಮಾರಿ ಬುಡಕಟ್ಟು ಸಮುದಾಯ ಸೋಮವಾರ ಪ್ರತಿಭಟಿಸಿತು.
ಈ ಪ್ರಕರಣವು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಉನ್ನತ ತನಿಖೆಗಾಗಿ ಸಿಐಡಿಗೆ ವಹಿಸಿ ಸೂಕ್ತ ನ್ಯಾಯ ಒದಗಿಸಬೇಕು. ಸ್ಥಳೀಯ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣಿಸುತ್ತಿಲ್ಲ. ಆದ್ದರಿಂದ, ತನಿಖಾಧಿಕಾರಿಗಳನ್ನು ಬದಲಾಯಿಸಿ ಹೊಸ ಅಧಿಕಾರಿಗಳನ್ನು ನೇಮಕ ಮಾಡಿ ವಿಚಾರಣೆ ನಡೆಸಬೇಕು. ಈ ಪ್ರಕರಣವನ್ನು ಎಸ್‌ಸಿ, ಎಸ್‌ಟಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಸಾವಿಗೆ ಕಾರಣದಾರವರನ್ನು ಬಂಧಿಸಬೇಕು. ಮೃತರ ಜೇಬಿನಲ್ಲಿ ಮೊಬೈಲ್ ನಂಬರ್‌ಗಳು ದೊರೆತಿದ್ದು ಅವರನ್ನು ವಿಚಾರಣೆಗೆ ಒಳಪಡಿಸಬೇಕು. ಮೃತರ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಒದಗಿಸಬೇಕು. ಮೃತ ಕುಟುಂಬಗಳಿಗೆ ಪ್ರಭಾವಿ ನಾಯಕರಿಂದ ಜೀವ ಬೆದರಿಕೆಯಿದ್ದು ಪೊಲೀಸರು ಸೂಕ್ತ ಭದ್ರತೆ ಒದಗಿಸಬೇಕು. ಅದಷ್ಟು ಬೇಗ ಪ್ರಕರಣವನ್ನು ತ್ವರಿತ ಗತಿಯಲ್ಲಿ ಕೈಗೆತ್ತಿಕೊಂಡು ತಪ್ಪಿಸ್ಥರಿಗೆ ಕಠಿಣ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.