ಜೀನ್ಸ್ ಪಾರ್ಕ್‌ಗೆ ಬಜೆಟ್‌ನಲ್ಲಿ ಅನುದಾನ

nagendra
Published on

ಬಳ್ಳಾರಿ: ಅಫೆರಲ್ ಜೀನ್ಸ್ ಪಾರ್ಕ್ ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ ಮೀಸಲಿಡುವ ವಿಶ್ವಾಸವಿದೆ ಎಂದು ಸಚಿವ ಬಿ.ನಾಗೇಂದ್ರ ಹೇಳಿದರು.

ಸ್ವಾತಂತ್ರೊೃೀತ್ಸವ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜೀನ್ಸ್ ಪಾರ್ಕ್ ನಿರ್ಮಾಣಗೊಳ್ಳಬೇಕು ಎಂಬುವುದು ಜಿಲ್ಲೆಯ ಬಹುದಿನಗಳ ಬೇಡಿಕೆಯಾಗಿದ್ದು, ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್‌ಗಾಂಧಿ ಅವರು ಕೂಡ ಚುನಾವಣೆ ಪ್ರಚಾರದ ವೇಳೆ 5 ಸಾವಿರ ಕೋಟಿ ರೂ. ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಅನುದಾನ ನೀಡಲು ಉತ್ಸುಕರಾಗಿದ್ದಾರೆ. ಮುಂದಿನ ಬಜೆಟ್‌ನಲ್ಲಿ ಅನುದಾನ ನೀಡುತ್ತಾರೆ ಎಂಬ ಭರವಸೆ ಇದೆ ಎಂದರು.

ವಿಮಾನ ನಿಲ್ದಾಣ ಹಾಗೂ ಒಣ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣದ ಕನಸು ನನಸಾಗಲಿದೆ. ವಿಮಾನ ನಿಲ್ದಾಣ ಕಾಮಗಾರಿಗಾಗಿ ಭೂಸ್ವಾಧೀನ ಪಡೆಸಿಕೊಂಡಿದ್ದು, ಕೆಲ ರೈತರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಸ್ವಲ್ಪ ವಿಳಂಬಗೊಂಡಿದೆ. ಮುಂದೆ ಉಡಾನ್ ಯೋಜನೆಯಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದರು. ಇನ್ನು ಒಣ ಮೆಣಸಿನಕಾಯಿ ಮಾರುಕಟ್ಟೆ ವಿಚಾರವಾಗಿ ಈಗಾಗಲೇ ಗುರುತಿಸಿರುವ ಸ್ಥಳದಲ್ಲಿ ಮಾರುಕಟ್ಟೆ ನಿರ್ಮಿಸಲು ಆಗುವುದಿಲ್ಲ. ಬೇರೆಡೆ 50ರಿಂದ 100 ಎಕರೆ ಪ್ರದೇಶದಲ್ಲಿ ಮಾರುಕಟ್ಟೆ, ಕೋಲ್ಡ್ ಸ್ಟೋರೇಜ್, ಗೋದಾಮು ನಿರ್ಮಾಣ ಮಾಡಲು ಚಿಂತನೆ ನಡೆದಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net