ಜೆಜೆಎಂ ಅನುದಾನ ಪೋಲಾಗದಿರಲಿ

Published on

ಬಳ್ಳಾರಿ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಪೂರ್ಣ ಕುಡಿಯುವ ನೀರಿನ ಪೂರೈಕೆಯ ಯೋಜನೆಯಾದ ಜಲಜೀವನ್ ಮಿಷನ್ ಕಾರ್ಯದ ಅನುದಾನ ಪೋಲಾಗದಂತೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಹೇಳಿದರು.

ನಗರದ ಖಾಸಗಿ ಹೊಟೇಲ್‌ನಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಪಂ ಸಹಯೋಗದೊಂದಿಗೆ ಫೀಡ್‌ಬ್ಯಾಕ್ ಫೌಂಡೇಶನ್ ವತಿಯಿಂದ ಜಲ ಜೀವನ್ ಮಿಷನ್ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಕುರಿತು ಸೋಮವಾರ ಹಮ್ಮಿಕೊಂಡಿದ್ದ ನಾಲ್ಕು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಈ ಮಹತ್ವಾಕಾಂಕ್ಷಿ ಯೋಜನೆ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕು. ಹೀಗಾಗಿ ಕಾರ್ಯಾಗಾರ ಆಯೋಜಿಸಲಾಗಿದ್ದು, ಅವಳಿ ಜಿಲ್ಲೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸರಿಯಾದ ಮಾಹಿತಿ ಪಡೆದುಕೊಳ್ಳಬೇಕು. ಯೋಜನೆಯ ಬಗ್ಗೆ ಕಾರ್ಯಗಾರದಲ್ಲಿ ಪಡೆದುಕೊಂಡ ಸಮಗ್ರ ವಿವರದೊಂದಿಗೆ ಕಾರ್ಯ ಯೋಜನೆ ರೂಪಿಸಿಕೊಂಡು ಯೋಜನೆ ಅನುಷ್ಠಾನಕ್ಕೆ ಸಹಕರಿಸಬೇಕು. ಸಮುದಾಯದ ಜನರ ಪರಸ್ಪರ ಸಹಕಾರದೊಂದಿಗೆ ಜೆಜೆಎಂ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿ ಮತ್ತು ಸಿಬ್ಬಂದಿಗಳು ಶ್ರಮಿಸಬೇಕು. ಇದಕ್ಕೆ ಆಯಾ ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಅಧಿಕಾರಿಗಳು ಕೈಜೋಡಿಸಬೇಕು ಎಂದು ತಿಳಿಸಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಮಾತನಾಡಿ, ಕ್ಷೇತ್ರ ಮಟ್ಟದಲ್ಲಿ ಕಾರ್ಯಕ್ರಮಗಳ ಜತೆಗೆ ಜೆಜೆಎಂ ಯೋಜನೆಯಡಿಯಲ್ಲಿ ಅನುಷ್ಠಾನವಾಗುತ್ತಿರುವ ಕಾಮಗಾರಿಗಳ ಬಗ್ಗೆಯು ಸಂಪೂರ್ಣವಾದ ಮಾಹಿತಿ ಹೊಂದಿರಬೇಕು. ಯೋಜನೆಯ ಬಗ್ಗೆ ಯಾವುದೇ ನ್ಯೂನತೆಗಳಿದ್ದರೆ ಸಾಧ್ಯವಾದಷ್ಟು ತಮ್ಮ ಹಂತದಲ್ಲಿಯೇ ಬಗೆಹರಿಸಲು ಶ್ರಮಿಸಬೇಕು. ಅದೇರೀತಿ ಯೋಜನೆಯ ಮಹತ್ವವನ್ನು ತಿಳಿಸಿ ಆ ಯೋಜನೆಯು ಅನುಷ್ಠಾನ ಮಟ್ಟದಲ್ಲಿ ಎಲ್ಲರ ಜತೆ ಸೇರಿ ಕೆಲಸ ಮಾಡಿದರೆ ಮಾತ್ರ ಈ ಯೋಜನೆಯು ಯಶಸ್ವಿಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಗಾರದಲ್ಲಿ ಗುರುಗಾವ್‌ನ ಫೀಡ್ ಬ್ಯಾಕ್ ಫೌಂಡೇಶನ್‌ನ ಸಿಇಒ ಅಜಯ್ ಸೀನಾ ಶಿಬಿರಾರ್ಥಿಗಳಿಗೆ ಜೆಜೆಎಂ ಯೋಜನೆ ಅನುಷ್ಠಾನದ ಕುರಿತು ತರಬೇತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net