ಆರೋಗ್ಯ ವ್ಯವಸ್ಥೆ ಉನ್ನತೀಕರಿಸಲು ಕೈಜೋಡಿಸಿ

Published on

ಬಳ್ಳಾರಿ: ಆರೋಗ್ಯ ಇಲಾಖೆ ಮತ್ತು ಮಾಧ್ಯಮಗಳು ಸಮಾಜದಲ್ಲಿ ಸಂಪರ್ಕ ಸೇತುವೆಯಂತೆ ಕಾರ್ಯನಿರ್ವಹಿಸುತ್ತಿದ್ದು, ಆರೋಗ್ಯ ವ್ಯವಸ್ಥೆಯನ್ನು ಇನ್ನಷ್ಟು ಉನ್ನತೀಕರಿಸಲು ಮಾಧ್ಯಮ ಪ್ರತಿನಿಧಿಗಳು ಕೈಜೋಡಿಸಬೇಕು ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ಹೇಳಿದರು.

ಇಲ್ಲಿನ ಡಿಎಚ್‌ಒ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಮಾಹಿತಿ ಶಿಕ್ಷಣ ಸಂವಹನ ವಿಭಾಗ ಸಹಯೋಗದೊಂದಿಗೆ ಆರೋಗ್ಯ ಅಭಿಯಾನದಡಿ ಮಾಧ್ಯಮ ಪ್ರತಿನಿಧಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಪರಿಚಯ ಮತ್ತು ಜಾಗೃತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗುತ್ತಿರುವ ಎಲ್ಲ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ದಿನಂಪ್ರತಿ ಪತ್ರಿಕೆಗಳಲ್ಲಿ ಪ್ರಕಟಗೊಳ್ಳುತ್ತಿರುವ ಕುರಿತು ಜಿಲ್ಲೆಗೆ ರಾಜ್ಯಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಳೆದ ನವೆಂಬರ್ ತಿಂಗಳಲ್ಲಿ ನಡೆದ ಬಾಣಂತಿಯರ ಸಾವು ಪ್ರಕರಣ ಘಟನೆಯು ಸಾಕಷ್ಟು ಪರಿಣಾಮ ಬೀರಿತು. ಇದರಿಂದ ಸಾರ್ವಜನಿಕರು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಬರುವುದು ಸಹ ಕುಗ್ಗಿತ್ತು. ಆದ,ೆ ಮಾಧ್ಯಮದವರು ಜನರಲ್ಲಿ ಜಾಗೃತಿ ಮೂಡಿಸುವ ವರದಿಗಳನ್ನು ಪ್ರಕಟಿಸಿದ ಕಾರಣದಿಂದಾಗಿ ಬರುತ್ತಾ ಕ್ರಮೇಣವಾಗಿ ಸುಧಾರಣೆ ಹೊಂದುತ್ತಿದೆ ಎಂದು ತಿಳಿಸಿದರು.

ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಹಾಗೂ ತುರ್ತು ಸಂದರ್ಭಗಳಲ್ಲಿಯೂ ಜಿಲ್ಲಾ ಆರೋಗ್ಯ ಇಲಾಖೆಯು ಉತ್ತಮ ಸೇವೆ ನೀಡುತ್ತಿದೆ. ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದರ ಜತೆಗೆ ಮಾರಕ ರೋಗಗಳನ್ನೂ ಸಹ ತಡೆಗಟ್ಟಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆಯು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದೆ. ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಆರೋಗ್ಯ ಸೇವೆಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಮಾಧ್ಯಮ ಪ್ರತಿನಿಧಿಗಳು ಹೆಚ್ಚಿನ ರೀತಿಯಲ್ಲಿ ಪ್ರಚಾರ ನೀಡಬೇಕು. ಜಿಲ್ಲೆಯಲ್ಲಿ ಹೆರಿಗೆ ಪ್ರಕರಣಗಳು ಜಿಲ್ಲಾಸ್ಪತ್ರೆ ಮತ್ತು ಬಿಮ್ಸ್‌ನಲ್ಲಿ ಹೆಚ್ಚು ಆಗುತ್ತಿರುವುದರಿಂದ, ಶಿಶು ಮತ್ತು ತಾಯಿ ಮರಣ ತಡೆಗೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಯಾವುದೇ ಆರೋಗ್ಯ ಸೇವೆಗಳು, ಸೌಲಭ್ಯಗಳು ಹಾಗೂ ಇತರೆ ಕುಂದು ಕೊರತೆಗಳು ಕಂಡು ಬಂದಲ್ಲಿ ಸಂಬಂಧಿಸಿದ ವಿಭಾಗದ ಅಧಿಕಾರಿಗಳ ಗಮನಕ್ಕೆ ತರಬಹುದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಸಲಹೆ ನೀಡಿದರು.

ಬಳಿಕ ಆರೋಗ್ಯ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನೊಳಗೊಂಡಂತಹ ಸಂಕ್ಷಿಪ್ತ ಮಾಹಿತಿಯುಳ್ಳ ಕಿರುಹೊತ್ತಿಗೆಯನ್ನು ಅನಾವರಣಗೊಳಿಸಲಾಯಿತು. ಕಾರ್ಯಾಗಾರದಲ್ಲಿ ಮಾನಸಿಕ ಆರೋಗ್ಯ ಕಾರ್ಯಕ್ರಮ, ಕುಷ್ಠರೋಗ ನಿರ್ಮೂಲನೆ, ಮೆದುಳಿನ ಆರೋಗ್ಯ ಉಪಕ್ರಮ, ತಂಬಾಕು ನಿಯಂತ್ರಣ, ಪುರುಷ ಸಂತಾನನಿರೋಧ ಶಸ್ತ್ರಚಿಕಿತ್ಸೆ, ರೇಬಿಸ್ ನಿಯಂತ್ರಣ ಸೇರಿದಂತೆ ಇತರೆ ಆರೋಗ್ಯ ಕಾರ್ಯಕ್ರಮಗಳ ಕುರಿತು ಸಂಬಂಧಿಸಿದ ವೈದ್ಯಾಧಿಕಾರಿಗಳು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net