ಬಳ್ಳಾರಿ : ಸಮಾಜದಲ್ಲಿನ ಆರರಿಂದ ಹದಿನಾಲ್ಕು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಖಚಿತವಾಗಿ ಶಿಕ್ಷಣ ದೊರೆಯಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣಾ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದೊಂದಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009 ರ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕಿದ್ದು, ಮಕ್ಕಳಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸುವುದು ವಿವಿಧ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.
ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಇಲ್ಲವಾದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಕರೆತರುವ ಕೆಲಸ ಮಾಡಬೇಕು ಜತೆಗೆ ಯಾವ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ವಿಫಗೊಂಡಲ್ಲಿ ಶಿಸ್ತು ಕ್ರಮಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜನಸಾಮಾನ್ಯರಿಗೆ ಮನವರಿಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಕ್ಕಳ ರಕ್ಷಣಾ ನೀತಿ ಅನ್ವಯ ಪ್ರತಿಯೊಂದು ಶಾಲಾ-ಕಾಲೇಜು, ವಸತಿ ನಿಲಯಗಳಲ್ಲಿ ಮಕ್ಕಳ ಸಹಾಯವಾಣಿ 1098 ಫಲಕ ಹಾಗೂ ಸಲಹಾ ಪೆಟ್ಟಿಗೆ ಅಳವಡಿಸಬೇಕು ಎಂದು ನಿರ್ದೇಶಿಸಿದರು.