ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿರಲಿ

Published on

ಬಳ್ಳಾರಿ ; ಜಿಲ್ಲೆಯಲ್ಲಿ ಜ.30 ರಿಂದ ಫೆ.13 ರ ವರೆಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಹೇಳಿದರು.

ಇಲ್ಲಿನ ಡಿಸಿ ಕಚೇರಿ ಸಭಾಂಗಣದಲ್ಲಿ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನದ ಕುರಿತು ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ವ್ಯಾಪಕ ಮಾಹಿತಿ ನೀಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ತಿಳಿಸಬೇಕು ಎಂದರು.

ಅಭಿಯಾನದಲ್ಲಿ ಮಾಡುವ ಸರ್ವೇ ಕಾರ್ಯವು ಯೋಜನಾಧಾರಿತವಾಗಿರಬೇಕು. ಸಮೀಕ್ಷೆ ಕಾರ್ಯದಲ್ಲಿ ಸ್ಥಳೀಯ ಮುಖಂಡರು ಮತ್ತು ಸ್ಥಳೀಯ-ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಹಕಾರ ಪಡೆದುಕೊಳ್ಳಬೇಕು. ಅಂದಾಗ ಮಾತ್ರ ಪ್ರಕರಣಗಳನ್ನು ಗುರುತಿಸಲು ಸಾಧ್ಯ ಎಂದು ಅವರು ನಿರ್ದೇಶನ ನೀಡಿದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೀರೇಂದ್ರಕುಮಾರ ಮಾತನಾಡಿ, ಕುಷ್ಠರೋಗವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಇದಕ್ಕೆ ಭಯಪಡುವ ಅಗತ್ಯವಿರುವುದಿಲ್ಲ. ಜಿಲ್ಲೆಯ ಸಂಡೂರು ಮತ್ತು ಕುರುಗೋಡು ಭಾಗಗಳಲ್ಲಿ ಹೆಚ್ಚು ಪ್ರಕರಣ ಕಂಡುಬರುತ್ತಿದ್ದು, ಈ ಜಾಗೃತಿ ಅಭಿಯಾನದ ಸಂದರ್ಭದಲ್ಲಿ ಗ್ರಾಮಗಳಲ್ಲಿ ಜಾಗೃತಿ ಮೂಡಿಸುವುದೂ ಸೇರಿದಂತೆ ಕುಷ್ಠರೋಗ ನಿರ್ಮೂಲನೆಯ ಕುರಿತು ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಲಾಗುವುದು ಎಂದರು.

ಸಭೆಯಲ್ಲಿ ನಿಕ್ಷಯಮಿತ್ರ ಯೋಜನೆ, ನಾಯಿ ಕಡಿತ, ಹಾವು ಕಡಿತ ಸೇರಿದಂತೆ ವಿವಿಧ ವಿಷಯಗಳ ಕುರಿತು ಸುಧೀರ್ಘ ಚರ್ಚಿಸಲಾಯಿತು. ಬಳಿಕ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕುರಿತು ಪ್ರತಿಜ್ಞೆಯನ್ನು ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net