ಬಾಲ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ಚುರುಕಾಗಲಿ

Published on

ಬಳ್ಳಾರಿ : ಬಾಲಕಾರ್ಮಿಕ ಅನಿಷ್ಠ ಪದ್ಧತಿ ನಿರ್ಮೂಲಿಸಲು ವಿವಿಧ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ಅನಿರೀಕ್ಷಿತ ದಾಳಿ ನಡೆಸಿ, ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸುವ ಕಾರ್ಯ ಚುರುಕಾಗಬೇಕು ಎಂದು ಡಿಸಿ ಪ್ರಶಾಂತಕುಮಾರ ಮಿಶ್ರಾ ಹೇಳಿದರು.

ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಯೋಜನೆಯ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಶಾಲೆಗಳಲ್ಲಿ ಮಕ್ಕಳು ಏಳು ದಿನ ಮೇಲ್ಪಟ್ಟು ಗೈರಾಗಿದ್ದರೆ ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರು ಮನೆ ಭೇಟಿ ನಡೆಸಿ, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.

ಈಗಾಗಲೇ ಜಾರಿಯಲ್ಲಿರುವ ಜಿಲ್ಲಾ ಹಾಗೂ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕಾಲಕಾಲಕ್ಕೆ ಕಾರ್ಯಪಡೆ ಸಭೆಯನ್ನು ನಡೆಸಿ, ದಾಳಿಗಳನ್ನು ಕೈಗೊಂಡು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ಚುರುಕಾಗಬೇಕು. ಕೆಲಸಕ್ಕೆ ನೇಮಿಸಿಕೊಂಡ ಮಾಲೀಕರ ವಿರುದ್ಧ ಕ್ರಮಕೈಗೊಳಬೇಕೆಂದು ತಿಳಿಸಿದರು.

ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಮಾತನಾಡಿ, ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಈವರೆಗೆ 20 ಆಕಸ್ಮಿಕ ದಾಳಿಗಳನ್ನು ನಡೆಸಲಾಗಿದ್ದು, ಒಟ್ಟು 24 ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಿ, ದುಡಿಸಿಕೊಳ್ಳುತ್ತಿರುವ ಮಾಲೀಕರ ವಿರುದ್ಧ 19 ಪ್ರಕರಣ ದಾಖಲಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net