ಹಿರಿಯ ನಾಗರಿಕರನ್ನು ಗೌರವಿಸೋಣ

Published on

ಬಳ್ಳಾರಿ : ಸರ್ಕಾರವು ಹಿರಿಯರ ರಕ್ಷಣೆ ಹಾಗೂ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ರೂಪಿಸಿದ್ದು, ತಲುಪಿಸಲು ಸಹಕಾರ ಅಗತ್ಯವಿದೆ ಎಂದು ಎಡಿಸಿ ಮಹಮ್ಮದ್ ಎನ್.ಜುಬೇರ್ ಹೇಳಿದರು.

ಇಲ್ಲಿನ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದೊಂದಿಗೆ ಮಂಗಳವಾರ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಉಚಿತವಾಗಿ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಗುತ್ತಿದೆ. ವಯೋಸಹಜ ಅಂಗವಿಕಲತೆಯಿಂದಾಗುವ ಸಮಸ್ಯೆಗಳನ್ನು ನಿವಾರಿಸಲು ಈ ಸಲಕರಣೆಗಳು ಸಹಕಾರಿಯಾಗಲಿವೆ. ಹಿರಿಯರು ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಆಗ ಮಾತ್ರ ಯೋಜನೆ ಸಫಲವಾಗಲಿದೆ ಎಂದರು.

ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಮಾತನಾಡಿ, ಅಂಗವೈಕಲ್ಯ ಶಾಪವಲ್ಲ. ಅದನ್ನು ಮೆಟ್ಟಿ ನಿಲ್ಲಬೇಕು, ಕುಗ್ಗಬಾರದು. ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಸರ್ಕಾರವು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಸದುಪಯೋಗ ಪಡೆದು ಉತ್ತಮ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ನೋಂದಣಿಯಾದ ಜಿಲ್ಲೆಯ 582 ಹಿರಿಯ ನಾಗರಿಕರಿಗೆ 1,754 ವಿವಿಧ ರೀತಿಯ ಸಾಧನ-ಸಲಕರಣೆಗಳನ್ನು ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net