ಮುಂದಿನ ಪೀಳಿಗೆಗೆ ಪರಿಸರ ಉಳಿಸೋಣ

Published on

ಬಳ್ಳಾರಿ : ಮುಂದಿನ ಪೀಳಿಗೆಗಾಗಿ ನಾವೆಲ್ಲರೂ ಪರಿಸರವನ್ನು ಉಳಿಸುವ ಮತ್ತು ಬೆಳೆಸುವ ಕಾರ್ಯವಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಕರೆ ನೀಡಿದರು.

ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಅರಣ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ವಿದ್ಯಮಾನದಲ್ಲಿ ಮಾನವನು ಅನೇಕ ಆವಿಷ್ಕಾರಗಳಿಂದ ಅತೀ ಮುಂಚೂಣಿಯಾಗಿ ಮುಂದುವರೆಯುತ್ತಿದ್ದಾನೆ. ಸ್ವಲ್ಪ ನಿಧಾನಗತಿಯಲ್ಲಿ ಚಲಿಸಿದರೆ ಉತ್ತಮ. ಮಾನವನ ಅಗತ್ಯೆಗಳಿಗಾಗಿ ಒಂದು ಮರವನ್ನು ಕಟಾವು ಮಾಡಿದರೆ, ಮುಂದೆ 20 ಗಿಡಗಳನ್ನು ನೆಟ್ಟು ಪೋಷಿಸುವ ಸಂಕಲ್ಪ ಹೊಂದಬೇಕು. ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತ-ಮುತ್ತ ಆವರಣದಲ್ಲಿ ಜಾಗವಿದ್ದರೆ ಗಿಡ ನೆಟ್ಟು ಬೆಳೆಸುವ ಕಾರ್ಯ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಈ ವರ್ಷದ ಘೋಷವಾಕ್ಯವಾದ ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಎಂಬಂತೆ ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟು ಕಡಿಮೆಗೊಳಿಸಲು ಪಣತೊಡೋಣ ಎಂದು ತಿಳಿಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಟಿ.ಎಂ.ಸಿದ್ದೇಶ್ವರ ಬಾಬು ಮಾತನಾಡಿ, ಪ್ರಪಂಚದಲ್ಲಿ ಸಕಲ ಜೀವಿಗಳ ಏಳಿಗೆಗೆ ಪರಿಸರವು ಅತ್ಯಾವಕಾಶವಾಗಿದ್ದು, ಪರಿಸರ ಇಲ್ಲದಿದ್ದರೆ ನಾವಿಲ್ಲ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಅದನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ನೀಡೋಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರೌಢ ಮತ್ತು ಕಾಲೇಜು ಮಟ್ಟದಲ್ಲಿ ಏರ್ಪಡಿಸಿದ್ದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಮಾಣ ಪತ್ರ ಮತ್ತು ಗಿಡ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net