ಬಳ್ಳಾರಿ ; ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಿಸಿದೆ ಎಂದು ಮೇಯರ್ ಮುಲ್ಲಂಗಿ ನಂದೀಶ್ ಹೇಳಿದರು.
ನಗರದ ಕೇಂದ್ರ ಬಸ್‌ನಿಲ್ದಾಣದಲ್ಲಿ ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸಹಯೋಗದೊಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ ಮತ್ತು ಯುವನಿಧಿ ಯೋಜನೆಗಳಿಗೆ ಆರಂಭದಲ್ಲಿ ಟೀಕೆ-ಪ್ರಹಾರಗಳು ನಡೆದಿದ್ದವು. ಅವೆಲ್ಲವುಗಳನ್ನು ಮೆಟ್ಟಿನಿಂತು ದೇಶದಲ್ಲಿಯೇ ಮಾದರಿ ಸರ್ಕಾರವಾಗಿದೆ ಎಂದರು.
ಎಡಿಸಿ ಮಹಮ್ಮದ್ ಎನ್. ಜುಬೇರ್ ಮಾತನಾಡಿ, ಸರ್ಕಾರ ಎರಡು ಪೂರೈಸಿರುವ ಹಿನ್ನಲ್ಲೆಯಲ್ಲಿ ಸರ್ಕಾರದ ಸಾಧನೆ ಮತ್ತು ಯೋಜನೆಗಳ ಮಾಹಿತಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿ ಜನರ ಗಮನ ಸೆಳೆಯುವಂತೆ ಮಾಡುತ್ತಿದ್ದು, ಈ ಯೋಜನೆಗಳು ಜನರ ಮನೆಯ ಬಾಗಿಲಿಗೆ ತಲುಪಿಸುವುದರ ಜತೆಗೆ ಸರ್ಕಾರದಿಂದ ಜಾರಿ ಮಾಡುವಂತಹ ಯೋಜನೆಗಳ ಸೌಲಭ್ಯಗಳನ್ನು ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಿರುವ ವಸ್ತು ಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಜೂ 26 ರ ಅವಕಾಶವಿದೆ.