

ಬಳ್ಳಾರಿ: ಮೈಸೂರಿನಲ್ಲಿ ಯುವತಿ ಮೇಲಿನ ಸಾಮೂಹಿಕ, ಅತ್ಯಾಚಾರ ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ನಗರದ ಡಿಸಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಎಐಎಂಎಸ್‌ಎಸ್‌ನ ಜಿಲ್ಲಾ ಅಧ್ಯಕ್ಷೆ ಎ.ಶಾಂತಾ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆಗಿರುವುದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಸರ್ಕಾರ ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಇಂತಹ ಘಟನೆಗಳಿಂದ ಪಾಲಕರು ಮಕ್ಕಳ ವಿದ್ಯಾಭ್ಯಾಸ ಮೊಟಕುಗೊಳಿಸುತ್ತಾರೆ. ವಿದ್ಯಾರ್ಥಿನಿಯರು, ಒಂಟಿ ಮಹಿಳೆಯರು ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿದಾಗ ಅನೇಕ ಪುಂಡಪೋಕರಿಗಳು ಹಿಂಬಾಲಿಸಿ ಚುಡಾಯಿಸಿದ ಪ್ರಕರಣಗಳು ಅನೇಕ ಕಡೆ ವರದಿಯಾಗಿವೆ. ಹೀಗಾಗಿ ಅಂತಹ ಪ್ರದೇಶಗಳಲ್ಲಿ ಸೂಕ್ತ ಭದ್ರತೆ ಒದಗಿಸುವುದರ ಜತೆಗೆ ಪೊಲೀಸ್ ಗಸ್ತು ನಿರಂತರವಾಗಿರಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.