ಅಧಿಕಾರಿಗಳು ಅಗತ್ಯ ಸಿದ್ಧತೆಕೈಗೊಳ್ಳಿ

Published on

ಬಳ್ಳಾರಿ : ಜಿಲ್ಲೆಯಲ್ಲಿ ಜೂ 12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಎಡಿಸಿ ಮಹಮ್ಮದ್ ಎನ್. ಜುಬೇರ್ ಹೇಳಿದರು.

ಇಲ್ಲಿನ ಡಿಸಿ ಕಚೇರಿ ಸಭಾಂಗಣದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿಯ ವಿರೋಧಿ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕಾರ್ಯಕ್ರಮಕ್ಕೆ ಜಿಲ್ಲಾ ಕೇಂದ್ರ ಸೇರಿದಂತೆ ತಾಲೂಕುಗಳಲ್ಲಿ ಸಹ ಆಚರಣೆ ಮಾಡಬೇಕು. ಈ ಬಗ್ಗೆ ಆಯಾ ತಹಸೀಲ್ದಾರರು ಅಧಿಕಾರಿಗಳಿಗೆ ಸೂಚಿಸಬೇಕು ಎಂದರು.

ಜಿಲ್ಲೆಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಸೇರಿದಂತೆ ಪಪಂ ವ್ಯಾಪ್ತಿಯಲ್ಲಿನ ಕಸ ವಿಲೆವಾರಿ ವಾಹನಗಳಲ್ಲಿ ಉಚಿತವಾಗಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಪದ್ಧತಿ ಕುರಿತು ಜಿಂಗಲ್ಸ್ ಪ್ರಸಾರ ಮಾಡಬೇಕು. ಪ್ರತಿಜ್ಞಾ ವಿಧಿ ಸ್ವೀಕರಿಸಲು ಇಲಾಖೆಗಳಿಗೆ ಸುತ್ತೋಲೆ ಹೊರಡಿಸಿ ಕ್ರಮವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಮಾತನಾಡಿ, ಇಲ್ಲಿನ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದು ಅಂದು ಜಾಗೃತಿ ಜಾಥಾವೂ ನಡೆಯಲಿದೆ. ಈ ವೇಳೆ ಆಟೋ ಮೈಕಿಂಗ್ ಮೂಲಕ ಘೋಷಣೆಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಾಲಕಾರ್ಮಿಕ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಲು ಜಾಗೃತಿ ಮೂಡಿಸಲಾಗುವುದು. ಕಾರ್ಯಕ್ರಮಕ್ಕೆ ಆಗಮಿಸಿದ ಮಕ್ಕಳಿಗೆ ಲಘು-ಉಪಹಾರ ಮತ್ತು ಹಾಲು ವಿತರಿಸುವ ಸಂಬಂಧ ಕೆಎಂಎಫ್‌ಗೆ ಪತ್ರ ಬರೆಯಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕತೆಯಿಂದ ಬಿಡುಗಡೆಗೊಂಡು ಶಾಲಾ ಮುಖ್ಯವಾಹಿನಿಗೆ ಸೇರಿಸಿರುವ ಮಕ್ಕಳು ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net