ಬಳ್ಳಾರಿ : ನಗರದಲ್ಲಿ ಜ.26ರಂದು ನಡೆಯುವ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಹೇಳಿದರು.
ಇಲ್ಲಿನ ಹೊಸ ಡಿಸಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಇಲ್ಲಿನ ಬಿಮ್ಸ್ ಮೈದಾನದಲ್ಲಿ ಮೈದಾನದಲ್ಲಿ ಆಚರಿಸಲಾಗುವುದು. ಶಿಷ್ಠಾಚಾರದ ನಿಯಮಗಳಂತೆ ಸಮಾರಂಭದ ಆಹ್ವಾನ ಪತ್ರಿಕೆ ಮುದ್ರಿಸಿ, ಆಹ್ವಾನ ಪತ್ರಿಕೆಗಳನ್ನು ಜನಪ್ರತಿನಿಧಿಗಳಿಗೆ, ಗಣ್ಯರಿಗೆ ವಿತರಿಸಲು ಕ್ರಮವಹಿಸಬೇಕು ಎಂದರು.
ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಚರಿಸಬೇಕು. ವಿವಿಧ ಇಲಾಖೆಯ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.
ಬಿಮ್ಸ್ ಮೈದಾನ ಆವರಣವನ್ನು ಸ್ವಚ್ಛಗೊಳಿಸಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಗಣ್ಯರಿಗೆ ಆಸನ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ನಿರ್ದೇಶಿಸಿದರು. ಪರೇಡ್ ವ್ಯವಸ್ಥೆ ಏರ್ಪಡಿಸಲು ಕ್ರಮ ಕೈಗೊಳ್ಳಬೇಕು. ಶಾಲಾ ಮಕ್ಕಳಿಂದ ಜನಾಕರ್ಷಣಿಯವಾಗಿ ದೇಶಭಕ್ತಿ ಬಿಂಬಿಸುವ ಕನ್ನಡ ಹಾಡುಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥೆಗೊಳಿಸಬೇಕು. ಇಲ್ಲಿನ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ದೇಶಪ್ರೇಮ ಪ್ರಸ್ತುತಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.