ಆರೋಗ್ಯ ಬಲವರ್ಧನೆಗೆ ಯೋಜನೆ ರೂಪಿಸಿ

Published on

ಬಳ್ಳಾರಿ ; ಜಿಲ್ಲೆಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯ ಬಲವರ್ಧನೆಗೆ ಹಾಗೂ ರಕ್ತಹೀನತೆ ತಡೆಗಟ್ಟಲು ಸೂಕ್ತ ಕಾರ್ಯಯೋಜನೆ ರೂಪಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಹೇಳಿದರು.

ಇಲ್ಲಿನ ಬಿಮ್ಸ್ ಸಭಾಂಗಣದಲ್ಲಿ ಜಿಲ್ಲಾಮಕ್ಕಳ ರಕ್ಷಣಾ ಘಟಕ, ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.ರಾಜ್ಯದಲ್ಲಿ ಕಲ್ಯಾಣ ಕರ್ನಾಟಕ ಭಾಗವು ಗರ್ಭಿಣಿ ಮತ್ತು ಬಾಣಂತಿಯರ ಆರೈಕೆಯಲ್ಲಿ ವಿಶೇಷ ಕಾಳಜಿ ವಹಿಸಬೇಕಿದೆ. ಜಿಲ್ಲೆಯಲ್ಲಿ ವಿಶೇಷ ಅನುದಾನವೂ ಲಭ್ಯವಿದ್ದು, ವೈದ್ಯಾಧಿಕಾರಿಗಳು ಸೂಕ್ತ ಕಾರ್ಯಯೋಜನೆ ರೂಪಿಸಿ ಮರಣ ಪ್ರಮಾಣ ತಗ್ಗಿಸಲು ಕ್ರಮವಹಿಸಬೇಕಿದೆ. ಬಾಲ್ಯದಲ್ಲಿ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಮಿಷನ್ ವಾತ್ಸಲ್ಯ ಯೋಜನೆಯಡಿ ನೆರವು ಒದಗಿಸಬೇಕು ಎಂದರು.

ಒಂದು ಬಾಲ್ಯವಿವಾಹ ನಡೆಯಬೇಕಾದರೆ ಮುಂಚಿತವಾಗಿ ಆ ವ್ಯಾಪ್ತಿಯ ಶಾಲೆಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ-ಕಾರ್ಯಕರ್ತೆಯರಿಗೆ ತಿಳಿಯುತ್ತದೆ. ಆಗ ಸಂಬಂಧಿಸಿದ ಮನೆಗೆ ಭೇಟಿ ನೀಡಿ ಪೋಷಕರಿಗೆ ಮನವರಿಕೆ ಮಾಡಬೇಕು. ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಗೆ ಅಧಿಕಾರಿಗಳು ಕ್ರಮವಹಿಸಬೇಕು. ಉದಾಸೀನತೆ ತೋರುವಂತಿಲ್ಲ ಎಂದು ಹೇಳಿದರು.

ಎಡಿಸಿ ಮಹಮ್ಮದ್ ಎನ್ ಜುಬೇರ್ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿ ತಿಂಗಳು ಒಂದು ಬಾರಿ ಪ್ರಧಾನಮಂತ್ರಿ ಮಾತೃತ್ವ ಸುರಕ್ಷತಾ ವಂದನಾ ಕಾರ್ಯಕ್ರಮದಡಿ ಗರ್ಭಿಣಿ ಮಹಿಳೆಯರಿಗೆ ಆರೋಗ್ಯ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ ನೀಡಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net