ಬಳ್ಳಾರಿ: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ಪ್ರಕರಣ ಖಂಡಿಸಿ ಜ.15 ರಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಗಣಪಾಲ ಐನಾಥ್‌ರೆಡ್ಡಿ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದ ಕೋಟ್ಯಾಂತರ ಜನರ ಭಾವನೆಗಳೊಂದಿಗೆ ಬೆರೆತಿರುವ ಗೋ ಮಾತೆಯನ್ನು ಸಂರಕ್ಷಣೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಅಸಡ್ಡೆಯನ್ನು ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗೋ ಶಾಲೆಗಳನ್ನು ಪುನರಾರಂಭಿಸಬೇಕು. ಗೋ ಶಾಲೆಗಳಿಗೆ ವಿಶೇಷ ಅನುದಾನ ನೀಡಬೇಕು. ಕೇಂದ್ರ ಪುರಸ್ಕೃತ ಗೋ ಆಧಾರಿತ ಯೋಜನೆಗಳನ್ನು ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಈ ರಾಜ್ಯದ ಬಹು ಸಂಖ್ಯಾತರ ಭಾವನೆಗಳಿಗೆ ಧಕ್ಕೆಯಾಗದ ರೀತಿ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಜೋಳ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ಶೀಘ್ರವಾಗಿ ಪ್ರಾರಂಭಿಸಬೇಕು. ಜಿಲ್ಲೆಯಲ್ಲಿ ರೈತರು ಅತಿ ಹೆಚ್ಚಾಗಿ ವಾಣಿಜ್ಯ ಬೆಳೆಯಾದ ಮೆಣಸಿನಕಾಯಿಯನ್ನು ಅವಲಂಬಿಸಿದ್ದು, ಮೆಣಸಿನಕಾಯಿ ಮಾರಾಟ ಮಾಡಲು ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದಿರುವುದರಿಂದ ರೈತರು ದೂರದ ಜಿಲ್ಲೆಗಳಿಗೆ ತೆರಳಿ ಬೆಳೆ ಮಾರಾಟ ಮಾಡುವಂತಾಗಿದ್ದು, ಇದರಿಂದ ರೈತರಿಗೆ ಹೆಚ್ಚಿನ ಸಾಗಣಿಕೆ ವೆಚ್ಚದ ಹೊರೆಯಾಗುತ್ತಿದ್ದು, ಅಪಘಾತಗಳು ಸಂವಿಸುತ್ತಿದ್ದು, ಜಿಲ್ಲೆಯಲ್ಲಿಯೇ ಶೀಘ್ರವಾಗಿ ಸೂಕ್ತ ಮೆಣಸಿನಕಾಯಿ ಮಾರುಕಟ್ಟೆಯನ್ನು ಪ್ರಾರಂಭಿಸಬೇಕು ಎಂದು ತಿಳಿಸಿದರು. ಸಫಾರಿ ಕರ್ಮಚಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹನುಮಂತಪ್ಪ ಇದ್ದರು.