ಮೂಲಭೂತ ಸೌಲಭ್ಯ ಕಲ್ಪಿಸಿ

Published on

ಬಳ್ಳಾರಿ : ಸಮಾಜದಲ್ಲಿ ಹಿರಿಯ ನಾಗರಿಕರಿಗೆ ಬೇಕಾದ ಗೌರವ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಹೇಳಿದರು.

ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ “ಹಿರಿಯ ನಾಗರಿಕರು: ನಮ್ಮ ಆಶೋತ್ತರಗಳು ನಮ್ಮ ಯೋಗಕ್ಷೇಮ ಮತ್ತು ನಮ್ಮ ಹಕ್ಕುಗಳನ್ನು ಸ್ಥಳೀಯ ಮತ್ತು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬಲ್ಲ ಸಶಕ್ತರು” ಎಂಬ ವಿಶ್ವಸಂಸ್ಥೆಯ ಘೋಷವಾಕ್ಯದಡಿ ಗುರುವಾರ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾನೂನಾತ್ಮಕ ಸಮಸ್ಯೆಗಳಿದ್ದರೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ದೂರು ಸಲ್ಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.

ಹಿರಿಯ ನಾಗರಿಕರು ಸಮಾಜದ ಬೇರುಗಳು. ಒಂದು ದೇಶ, ರಾಜ್ಯ ಅಭಿವೃದ್ಧಿಯಾಗಲು ಹಿರಿಯ ನಾಗರಿಕರ ಮಾರ್ಗದರ್ಶನ ಅವಶ್ಯಕವಾಗಿದೆ. ಇತ್ತೀಚಿನ ದಿನಗಳಲ್ಲಿ ಹಿರಿಯ ನಾಗರಿಕರನ್ನು ಕಡೆಗಣಿಸುತ್ತಿರುವುದು ಕಂಡುಬರುತ್ತಿದ್ದು, ವಿಷಾದನೀಯ ಸಂಗತಿಯಾಗಿದೆ. ಹಿರಿಯ ನಾಗರಿಕರನ್ನು ಗೌರವದಿಂದ ಕಾಣಬೇಕು. ಅವರನ್ನು ಕಡೆಗಣಿಸದೇ ಕಾಳಜಿ ವಹಿಸಿ ಒಂಟಿತನ ಕಾಡದೇ ಹಾಗೆ ನೋಡಿಕೊಳ್ಳಬೇಕು ಎಂದರು.

ಎಎಸ್ಪಿ ನವೀನ್ ಕುಮಾರ್ ಮಾತನಾಡಿ, ಮಕ್ಕಳು ತಮ್ಮ ಪೋಷಕರನ್ನು ಆರೈಕೆ ಮಾಡದೇ ಇರುವುದು, ವೃದ್ಧಾಶ್ರಮಕ್ಕೆ ಸೇರಿಸುವುದು, ಆಸ್ತಿ ಕಲಹ ಇನ್ನಿತರೆ ಸಮಸ್ಯೆಗಳು ಇದ್ದಲ್ಲಿ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ನ್ಯಾಯಮಂಡಳಿಯಿದೆ. ದೂರು ಸಲ್ಲಿಸಿ ವಿಚಾರಣೆ ನಡೆಸಬಹುದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶತಾಯುಶಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ ನಾಗರಿಕರಿಗೆ ಸನ್ಮಾನಿಸಲಾಯಿತು. ಬಳಿಕ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ವಿತರಿಸಲಾಯಿತು. ವಿವಿಧ ರೀತಿಯ ಸಲಕರಣೆ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net