ಬಳ್ಳಾರಿ : ಸಾರ್ವಜನಿಕರು-ಕಕ್ಷಿದಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಿಕೊಂಡು ಉತ್ತಮ ಜೀವನ ನಡೆಸಲು ಸದಾವಕಾಶ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ.ಶಾಂತಿ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮಾತನಾಡಿದರು.
ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದ ಲೋಕ-ಅದಾಲತ್ ನಲ್ಲಿ ಗಂಡ-ಹೆಂಡತಿ ಪ್ರಕರಣ ಇತ್ಯರ್ಥದ ಸಂದರ್ಭದಲ್ಲಿ ಪರಸ್ಪರ ನಂಬಿಕೆ ಹಾಗೂ ವಿಶ್ವಾಸದಿಂದ ಇದ್ದಾಗ ಒಳ್ಳೆಯ ಜೀವನ ಸಾಧ್ಯವಾಗುತ್ತದೆ. ತ್ವರಿತ ನ್ಯಾಯಕ್ಕಾಗಿ ಕಕ್ಷಿದಾರರು ಮುತುವರ್ಜಿ ವಹಿಸಿಕೊಂಡು, ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಭಾಗವಹಿಸಿದರೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆ ಹರಿಸಿಕೊಂಡು ಸಾಮರಸ್ಯ ಜೀವನ ನಡೆಸಬಹುದು ಎಂದರು.
ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನ್ಯಾಯಾಲಯದ ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಯ ಸಹಕಾರದೊಂದಿಗೆ ಮುಂದಿನ ದಿನಮಾನಗಳಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಕಾರ್ಯಪ್ರವೃತ್ತರಾಗುತ್ತಾರೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ ಮಾತನಾಡಿ, ಅಖಂಡ ಜಿಲ್ಲೆಯ 31 ನ್ಯಾಯಾಲಯಗಳಲ್ಲಿ ಒಟ್ಟು 65,278 ಪ್ರಕರಣಗಳು ಬಾಕಿ ಇದ್ದು, ಅವುಗಳಲ್ಲಿ 12,828 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವ ಸಲುವಾಗಿ ಗುರುತಿಸಲಾಗಿದ್ದು, ಅವುಗಳಲ್ಲಿ ಸುಮಾರು 8,300 ಪ್ರಕರಣಗಳು ಈಗಾಗಲೇ ರಾಜಿ ಸಂಧಾನದ ಮೂಲಕ ಮುಕ್ತಾಯವಾಗಿರುತ್ತವೆ. 3 ಲಕ್ಷಕ್ಕಿಂತ ಹೆಚ್ಚು ವ್ಯಾಜ್ಯಪೂರ್ವ ಪ್ರಕರಣಗಳು ಸಹ ಮುಕ್ತಾಯಗೊಂಡಿದ್ದು, ಈ ವರ್ಷದ ಕೊನೆಯ ಲೋಕ- ಅದಾಲತ್ ಯಶಸ್ವಿಯಾಗಿದೆ ಎಂದರು.