ಅಂಗನವಾಡಿ ನಿರ್ಮಾಣಕ್ಕೆ ನಿವೇಶನ ಕೊರತೆ

Published on

ಬಳ್ಳಾರಿ : ಜಿಲ್ಲೆಯಲ್ಲಿ ಸಮಗ್ರ ಶಿಶುಅಭಿವೃದ್ಧಿ ಯೋಜನೆ ಅನುಷ್ಠಾನ ಹಿನ್ನೆಲೆ ಬಾಡಿಗೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಶ್ವಾಶತ ಪರಿಹಾರ ಕಲ್ಪಿಸುವ ಉದ್ದೇಶ ಹೊಂದಿದೆ. ಆದರೆ, ಕಟ್ಟಡ ನಿರ್ಮಾಣಕ್ಕೆ ಸೂಕ್ತ ನಿವೇಶನ ಸಿಗದೆ ಇರುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ.

ಜಿಲ್ಲಾದ್ಯಂತ 1,358 ಅಂಗನವಾಡಿ ಕೇಂದ್ರಗಳಿದ್ದು, ಅವುಗಳಲ್ಲಿ 881 ಸ್ವಂತ ಕಟ್ಟಡಗಳನ್ನು ಹೊಂದಿವೆ. ಸುಮಾರು 103 ಕೇಂದ್ರಗಳು ಸರ್ಕಾರಿ ಶಾಲೆಗಳು ಸೇರಿದಂತೆ ಇತರ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ, 374 ಕೇಂದ್ರಗಳು ಬಾಡಿಗೆಯಲ್ಲಿ ನಡೆಯುತ್ತಿವೆ.

ಹಲವು ವರ್ಷಗಳಿಂದ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳು ಮಾಸಿಕ ಬಾಡಿಗೆ ಪಾವತಿ, ನಿರ್ವಹಣೆ ಹಾಗೂ ಮೂಲಸೌಕರ್ಯ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿವೆ. ಆದ್ದರಿಂದ, ಬಾಡಿಗೆ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳಿಗೆ ಶಾಶ್ವತ ಕಟ್ಟಡ ಒದಗಿಸುವ ಸಲುವಾಗಿ ಪ್ರಯತ್ನಿಸಲಾಗುತ್ತಿದೆ. ಬಳ್ಳಾರಿ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒ ಈ ವಿಷಯದ ಬಗ್ಗೆ ವಿಶೇಷ ಗಮನ ಹರಿಸಲಾಗಿದೆ. ಆದ್ದರಿಂದ, ಜಿಪಂ ಸಿಇಒ ಅವರು ಜಿಲ್ಲೆಯ ಮಹಾನಗರ ಪಾಲಿಕೆ ಆಯುಕ್ತರಿಗೆ, ಪುರಸಭೆ ನಿಗಮ, ಸಿಎಂಸಿಗಳು, ಆಯುಕ್ತರು, ತಹಶೀಲ್ದಾರ್, ತಾಪಂ ಇಒ ಮತ್ತು ಪಟ್ಟಣ ಪಂಚಾಯತಿ ಮುಖ್ಯಸ್ಥರಿಗೆ ಸೂಕ್ತವಾದ ನಿವೇಶನ ಹುಡುಕುವಂತೆ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ 247 ನಿವೇಶನಗಳ ಅವಶಕ್ಯತೆಯಿದೆ. ನಗರ 195 ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 47 ನಿವೇಶನಗಳನ್ನು ಹುಡುಕುವುದು ಕಷ್ಟವಾಗಿದೆ. ಅಲ್ಲದೆ, ಗ್ರಾಮೀಣ ಪ್ರದೇಶದಲ್ಲಿ ಸರ್ಕಾರದ ಭೂಮಿ ಕೆಲವಡೆ ದೊರೆಯುವ ಸಂಭವಿದೆ. ಆದರೆ, ನಗರ ಪ್ರದೇಶದಲ್ಲಿ ಅಂಗನವಾಡಿಗಳ ಕೇಂದ್ರಗಳಿಗೆ ಸರ್ಕಾರಿ ನಿವೇಶನ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ, ನಗರದಲ್ಲಿ ಅಸ್ತಿತ್ವದಲ್ಲಿರುವ ಕಟ್ಟಡಗಳ ಮೇಲ್ದರ್ಜೆಗೇರಿಸುವಿಕೆ ಮತ್ತು ಪುನರ್ನಿರ್ಮಾಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೂ ಕ್ರಮ ಕೈಗೊಂಡಿದೆ. 150 ಕಟ್ಟಡಗಳ ನಿರ್ಮಾಣಕ್ಕಾಗಿ ಕೆಎಂಇಆರ್‌ಸಿಗೆ ಮತ್ತು ಮೂರನೇ ಕೇಂದ್ರ ಕಟ್ಟಡಗಳ ನಿರ್ಮಾಣಕ್ಕಾಗಿ ಕೆಕೆಆರ್‌ಡಿಬಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಲ್ಲದೆ, ಶಾಸಕರ ಅನುದಾನದಡಿಯಲ್ಲಿ 23 ಕೇಂದ್ರಗಳನ್ನು ಪ್ರಸ್ತಾಪಿಸಲಾಗಿದೆ ಎಂದು ಇಲಾಖೆ ಅಧಿಕಾರಿ ತಿಳಿಸಿದರು.

ಬಾಕ್ಸ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರಸ್ತಕ ಸಾಲಿನಲ್ಲಿ ರಾಜ್ಯಾದ್ಯಂತ 5,000 ಕೇಂದ್ರಗಳಲ್ಲಿ ದ್ವಿಭಾಷಾ ಕ್ರಮದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಪ್ರಾರಂಭಿಸಲು ನಿರ್ಧರಿಸಿದೆ. ಜಿಲ್ಲೆಯಲ್ಲಿ 75 ಅಂಗನವಾಡಿ ಕೇಂದ್ರಗಳು ಎಲ್‌ಕೆಜಿ ತರಗತಿಗಳನ್ನು ಪ್ರಾರಂಭಿಸಲಿವೆ. ಈ ಹಿನ್ನೆಲೆ ಬಾಡಿಗೆ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳಿಗೆ ಭೂಮಿ ಹಂಚಿಕೆ ಪ್ರಕ್ರಿಯೆಯನ್ನು ಇಲಾಖೆ ಚುರುಕುಗೊಳಿಸಿದೆ. ರಾಜ್ಯಾದ್ಯಂತ ಒಟ್ಟು 69,922 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳಲ್ಲಿ 47,450 ಕೇಂದ್ರಗಳು ಮಾತ್ರ ಸ್ವಂತ ಕಟ್ಟಡಗಳನ್ನು ಹೊಂದಿದ್ದರೆ, 13,066 ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಮತ್ತು 9,406 ಕೇಂದ್ರಗಳು ಇತರ ಸರ್ಕಾರಿ ಕಟ್ಟಡಗಳಲ್ಲಿ ನಡೆಯುತ್ತಿವೆ ಎಂದು ಮೂಲಗಳು ತಿಳಿಸಿದವು.

ಕೋಟ್.. ಒಂದು ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 20 ಲಕ್ಷ ರೂ. ವ್ಯಯಿಸಲಾಗುವುದು. ಬಾಡಿಗೆ ಕಟ್ಟಡದಲ್ಲಿ ನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿವೇಶನಕ್ಕಾಗಿ ಜಿಪಂ ಸಿಇಒಗೆ ಪತ್ರ ಬರೆಯಲಾಗಿದೆ.

- ರಾಮಕೃಷ್ಣ, ಉಪನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಳ್ಳಾರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net