ಬಳ್ಳಾರಿಯಿಂದ ಸ್ಪರ್ಧಿಸಲು ಮಾಜಿ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ದಿವಾಕರ ಬಾಬು ಆಹ್ವಾನ

BLY-24-4
Published on

ಬಳ್ಳಾರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ಮಾಜಿ ಸಚಿವ ಎಂ.ದಿವಾಕರ ಬಾಬು ಆಹ್ವಾನಿಸಿದರು.
ಅಭಿವೃದ್ಧಿಯಲ್ಲಿ ಬಳ್ಳಾರಿ ಜಿಲ್ಲೆ ಹಿಂದುಳಿದಿದೆ. ಇಲ್ಲಿ ಯಾವುದೇ ಕೈಗಾರಿಕೆಗಳು ಬರುತ್ತಿಲ್ಲ. ಜಿಲ್ಲೆ ಅಭಿವೃದ್ಧಿಗೊಳ್ಳಬೇಕಾದರೆ ಸಿದ್ದರಾಮಯ್ಯ ಅವರು ಇಲ್ಲಿಂದಲೇ ಸ್ಪರ್ಧಿಸಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

2010ರದಲ್ಲಿ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡುವ ಮೂಲಕ ದೇಶದ ಗಮನ ಸೆಳೆದಿದ್ದ ಸಿದ್ದರಾಮಯ್ಯ, ನಂತರದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಉತ್ತಮ ಆಡಳಿತ ನೀಡಿದ್ದರು. ಅದೇ ರೀತಿ ಮತ್ತೊಮ್ಮೆ ಈ ಬಾರಿ ವಿಧಾನ ಸಭೆ ಚುನಾವಣೆಯಲ್ಲಿ ಬಳ್ಳಾರಿ ನಗರದಿಂದ ಸ್ಪರ್ಧಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು.

ಈಗಾಗಲೇ ಜಿಲ್ಲೆಯ ಹಿರಿಯ ನಾಯಕರಾದ ಅಲ್ಲಂ ವೀರಭದ್ರಪ್ಪ, ನಾರಾ ಸೂರ್ಯನಾರಾಯಣ ರೆಡ್ಡಿ ಸೇರಿ ಅನೇಕರೊಂದಿಗೆ ಚರ್ಚೆ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಇಲ್ಲಿಂದ ಸ್ಪರ್ಧಿಸಿದ್ದೇ ಆದರೆ ಎಲ್ಲರೂ ಒಗ್ಗಟ್ಟಿನಿಂದ ಅವರಿಗೆ ಬೆಂಬಲ ನೀಡುತ್ತೇವೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕುತ್ತಿದ್ದಾರೆ ಎನ್ನುವುದು ಸುಳ್ಳು ಎಂದು ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಮುಂದಿನ ವಾರದಲ್ಲಿ ಬಿಡುಗಡೆಗೊಳ್ಳಲಿದೆ. ಬಳ್ಳಾರಿ ನಗರದಿಂದ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಈ ಬಾರಿ ಹಿರಿತನವನ್ನು ಪರಿಗಣಿಸಲಾಗುವುದು ಎಂದು ವರಿಷ್ಠರು ತಿಳಿಸಿದ್ದಾರೆ. ಟಿಕೆಟ್ ಯಾರಿಗೇ ಸಿಕ್ಕರೂ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net