ಮೌಲ್ಯಧಾರಿತ ಶಿಕ್ಷಣ ಒದಗಿಸಲು ಶ್ರಮಿಸಿ

Published on

ಬಳ್ಳಾರಿ : ಗುಣಮಟ್ಟ ಹಾಗೂ ಮೌಲ್ಯಧಾರಿತ ಶಿಕ್ಷಣ ಒದಗಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.

ನಗರದ ಡಿಡಿಪಿಐ ಕಚೇರಿಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣಾ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದೊಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕುರಿತ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದರು. ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಹಿಂಸೆಗಳಿಂದ ವಿಮುಕ್ತಿಗೊಳಿಸಬೇಕು. ಹಾಗೆ ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸಬೇಕು. ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳಿಗೆ ಸಕಾಲದಲ್ಲಿ ಸೂಕ್ತ ನ್ಯಾಯ ಒದಗಿಸುವ ಜವಬ್ದಾರಿ-ಹೊಣೆ ಪ್ರತಿಯೊಬ್ಬ ಅಧಿಕಾರಿಗಳ ಮೇಲಿದೆ ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ವಿಶೇಷ ಚೇತನ ಮಕ್ಕಳ ವಿದ್ಯಾಭ್ಯಾಸವು ಕಲಿಕೆಯ ಪೂರಕವಾಗಿ ಸೃಷ್ಠಿಯಾಗಬೇಕು. ಗೃಹಾಧರಿತ ಶಿಕ್ಷಣ ಭೋದನೆ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಒದಗಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಹೆಚ್ಚಿದೆ. ಮಕ್ಕಳ ಹಾಗೂ ಪೋಷಕರ ಮನವೊಲಿಸಬೇಕು. ಮುಂಬರುವ ದಿನಮಾನಗಳಲ್ಲಿ ಶಾಲೆಯಿಂದ ದೂರ ಉಳಿದ ಮಕ್ಕಳಿಗೆ ಮರಳಿ ಶಾಲೆಗೆ ಕರೆತರಬೇಕೆಂದು ಹಾಜರಾತಿ ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಬಿಇಒ ಸಿದ್ದಲಿಂಗ ಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಡಿ ಸರ್ಕಾರಿ, ಅನುದಾನ, ಅನುದಾನ ರಹಿತ ಹಾಗೂ ಇತರೆ ವಸತಿ ನಿಲಯಗಳಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ 12,263 ಶಾಲೆಗಳಲ್ಲಿ 2,80,140 ಮಕ್ಕಳು ವ್ಯಾಸಾಂಗ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ಮತ್ತು ನಗರ ಪ್ರದೇಶ ವ್ಯಾಪ್ತಿಯಲ್ಲಿ ಒಟ್ಟು 4417 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಮುಂಬರುವ ದಿನಮಾನಗಳಲ್ಲಿ ಶಾಲೆಗೆ ಕರೆತರಲು ಶ್ರಮಿಸಲಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮೊದಲ ಮಹಿಳಾ ಶಿಕ್ಷಕಿ, ಅಕ್ಷರದವ್ವ ಸಾವಿತ್ರಿ ಭಾ ಫುಲೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net