ಆರೋಗ್ಯದ ಕಾಳಜಿ ವಹಿಸಿ

Published on

ಬಳ್ಳಾರಿ : ಜೀವನದಲ್ಲಿ ಎಷ್ಟೇ ಶ್ರೀಮಂತಿಕೆ ಇದ್ದರೂ ಆರೋಗ್ಯ ಇಲ್ಲವಾದಲ್ಲಿ ಅವನು ಬಡವ, ಹೀಗಾಗಿ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯ ಎಂದು ಮೇಯರ್ ಮುಲ್ಲಂಗಿ ನಂದೀಶ್ ಹೇಳಿದರು.

ನಗರದ ಡಿಎಚ್‌ಒ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೆಕ್ಷಣಾ ಘಟಕ ಹಾಗೂ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕೋಶ ಸಹಯೋಗದೊಂದಿಗೆ ಮಂಗಳವಾರ ಆಯೋಜಿಸಿದ್ದ ಗೃಹ ಆರೋಗ್ಯ ಯೋಜನೆಯ ಕಾರ್ಯಗಾರ ಮತ್ತು ವಿಸ್ತರಣೆ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರವು ಗೃಹ ಆರೋಗ್ಯ ಯೋಜನೆ ಜಾರಿ ಮಾಡಿರುವುದು ಬಡವರ್ಗದ ಜನರಿಗೆ ಬಹಳ ಉಪಯುಕ್ತವಾಗಿದೆ ಎಂದರು.

ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಮಾತನಾಡಿ, ರಾಜ್ಯ ಸರ್ಕಾರದ ಗೃಹ ಆರೋಗ್ಯ ಯೋಜನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡುವಂತೆ ಮಾಡಲು ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಮಟ್ಟಗಳಲ್ಲಿ ಹಂತ-ಹಂತವಾಗಿ ಜಾರಿಗೊಳಿಸಿ ಬೆಂಬಲ ನೀಡಲಾಗುವುದು ಎಂದು ಹೇಳಿದರು.

ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಮಾತನಾಡಿ, ಗೃಹ ಆರೋಗ್ಯ ಯೋಜನೆಯನ್ನು ಮೊದಲು ಕೋಲಾರ ಜಿಲ್ಲೆಯಲ್ಲಿ ಮಾತ್ರ ಪ್ರಾರಂಭಿಸಿದಾಗ ಹಲವು ಸಂಗತಿಗಳು ಬೆಳಕಿಗೆ ಬಂದವು. 14 ರೋಗಗಳನ್ನು ಅಸಾಂಕ್ರಾಮಿಕ ರೋಗಗಳೆಂದು ಗುರುತಿಸಲಾಗಿದ್ದು, ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಈಗಿನ ಕಾಲದಲ್ಲಿ ಯುವಜನತೆಯು ಹೆಚ್ಚಾಗಿ ಹೃದಯಾಘತಕ್ಕೆ ಒಳಗಾಗುತ್ತಿದ್ದು, ಪೋಷಕರು ತಮ್ಮ ಮಕ್ಕಳು ಸೇವಿಸುವ ಆಹಾರ ಮತ್ತು ಆರೋಗ್ಯದ ಮೇಲೆ ನಿಗಾವಹಿಸಬೇಕು ಎಂದರು. ಬಳಿಕ ಆರೋಗ್ಯ ಯೋಜನೆಯ ಕೈಪಿಡಿ ಪ್ರಸ್ತಕ ಬಿಡುಗಡೆಗೊಳಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net