ಬಳ್ಳಾರಿ : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಜನಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಎಸ್ಪಿ ಡಾ.ವಿ.ಜೆ.ಶೋಭಾರಾಣಿ ಹೇಳಿದರು.
ನಗರದ ಬಿಡಿಸಿಸಿ ಸಂಸ್ಥೆಯ ಕಟ್ಟಡ ಮೇಲ್ಬಾಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಆಡಿಟೋರಿಯಂ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷರು ಹಾಗೂ ಸದಸ್ಯರು ಜತೆಗೂಡಿಕೊಂಡು ಸಂಸ್ಥೆ ಉನ್ನತಮಟ್ಟಕ್ಕೆ ಬೆಳೆಸುವಲ್ಲಿ ಕೈಜೋಡಿಸಬೇಕು ಎಂದರು.
ಮೇಯರ್ ಮುಲ್ಲಂಗಿ ನಂದೀಶ್ ಮಾತನಾಡಿ, ಜಿಲ್ಲಾ ಬಿಡಿಸಿಸಿ ಸಂಸ್ಥೆಯು ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು ಮತ್ತು ವ್ಯಾಪಾರಿಗಳು ಹಾಗೂ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದೆ. ಈ ಸಂಸ್ಥೆಯ ಸರ್ವಾಂಗೀಣ ಅಭಿವೃದ್ಧಿಗೆ ಪಾಲಿಕೆಯು ಸಂಪೂರ್ಣ ಸಹಕಾರ ನೀಡಲಿದೆ. ಅಲ್ಲದೇ, ಸಂಸ್ಥೆ ಹಮ್ಮಿಕೊಳ್ಳುವ ಯಾವುದೇ ಜನಪರ ಕಾರ್ಯಕ್ರಮಗಳಿಗೆ ಬೆಂಬಲ ನೀಡಲಾಗುತ್ತದೆ ಎಂದರು.
ಬಿಡಿಸಿಸಿ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮಾತನಾಡಿ, ಸಂಸ್ಥೆಯು ರೈತಣ್ಣನ ಊಟ, ರೈತಣ್ಣನ ಕ್ಲಿನಿಕ್ ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಪ್ರಾರಂಭಿಸುವ ಮೂಲಕ ಸಮಾಜದ ಎಲ್ಲ ವರ್ಗಗಳಿಗೆ ಸೇವೆ ಸಲ್ಲಿಸುತ್ತಿದೆ. ಅಲ್ಲದೇ, ವಾಣಿಜ್ಯೋದ್ಯಮಿಗಳ, ಕೈಗಾರಿಕೋದ್ಯಮಿಗಳು, ವ್ಯಾಪಾರಿಗಳು, ತೆರಿಗೆ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಗೃಹ ಇಲಾಖೆ, ಕಂದಾಯ ಇಲಾಖೆ ಸೇರಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜತೆ ನಿರಂತರ ಸಂಪರ್ಕ ಅನೇಕ ಸಮಸ್ಯೆಗಳ ಪರಿಹಾರಕ್ಕೆ ಸಹಕಾರ ನೀಡುತ್ತಿದೆ ಎಂದರು.