ಬಳ್ಳಾರಿ : ಪಾಶ್ಚಾತ್ಯ ಉತ್ಪನ್ನ ತೊರೆದು, ದೇಶಿ ಉತ್ಪನ್ನಗಳನ್ನು ಬಳಸುವ ಮೂಲಕ ಸಾರ್ವಜನಿಕರು ತಮ್ಮ ಆರೋಗ್ಯ ಕಾಳಜಿ ವಹಿಸಬೇಕು ಎಂದು ಸಂಸದ ಈ.ತುಕಾರಾಮ್ ಹೇಳಿದರು.
ನಗರದ ರೈಲು ನಿಲ್ದಾಣದಲ್ಲಿ ಒಂದು ನಿಲ್ದಾಣ-ಒಂದು ಉತ್ಪನ್ನ ಯೋಜನೆಯಡಿ ಎನ್‌ಆರ್‌ಎಲ್‌ಎಂ ಸ್ವಸಹಾಯ ಸಂಘದ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟಿಸಿ ಮಾತನಾಡಿದರು. ಸ್ಥಳೀಯ ಉತ್ಪನ್ನಗಳ ಆಹಾರ ಪದಾರ್ಥಗಳಿಗೆ ಮಾರುಕಟ್ಟೆ ವಿಸ್ತರಣೆಯಾಗಲಿದೆ. ಮುಂದಿನ ದಿನಗಳಲ್ಲಿ ವಿಜಯನಗರ ಜಿಲ್ಲೆ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಎಲ್ಲ ರೈಲು ನಿಲ್ದಾಣಗಳಲ್ಲಿ ಮತ್ತು ನಗರ ಕೇಂದ್ರ ಬಸ್ ನಿಲ್ದಾಣಗಳಲ್ಲಿ ಉತ್ಪನ್ನ ಮಾರಾಟ ಮಳಿಗೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.
ಈ ಯೋಜನೆಯಿಂದ ಎನ್‌ಆರ್‌ಎಲ್‌ಎಂ ಸ್ವಸಹಾಯ ಸಂಘಗಳಿಗೆ ಅನುಕೂಲವಾಗಲಿದೆ. ಆರ್ಥಿಕ ಪ್ರಗತಿಗೂ ಇದು ಸಹಕಾರಿಯಾಗಲಿದೆ. ನೋಂದಣಿ ಮಾಡಿಕೊಂಡಿದ್ದ ಸ್ವ ಸಹಾಯ ಸಂಘಗಳ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಬಳಿಕ ಜಿಪಂ ಸಭಾಂಗಣದಲ್ಲಿ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಹಾಗೂ ಇತರೆ ಯೋಜನೆಗಳ ಕುರಿತಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.