ಬಳ್ಳಾರಿ; ಮಹಿಳೆಯರು ಸ್ವ-ಸಹಾಯ ಗುಂಪುಗಳ ಮೂಲಕ ಕಿರು ಉದ್ಯಮಗಳನ್ನು ಆರಂಭಿಸಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಹೇಳಿದರು.
ಇಲ್ಲಿನ ಜಿಪಂ ಸಭಾಂಗಣದಲ್ಲಿ ಜಿಪಂ, ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ಲಿಂಗತ್ವ ಪರಿವರ್ತಾನ ಅಭಿಯಾನ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಅಭಿವೃದ್ಧಿ ಹೊಂದಬೇಕು ಎಂದರು.
ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಮಾತನಾಡಿ, ಪ್ರಸ್ತಕ ಸಾಲಿನ ಆರ್ಥಿಕ ವರ್ಷದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಮುದಾಯಿತ ಕಾಮಗಾರಿಗಳು ಪ್ರಾರಂಭ ಆಗುತ್ತಿದ್ದು, ಉದ್ಯೋಗ ಚೀಟಿ ಹೊಂದಿದ ಕುಟುಂಬಗಳು ಮತ್ತು ವಿಶೇಷವಾಗಿ ಮಹಿಳೆಯರು ಬೇರೆ ಕಡೆ ಪಟ್ಟಣ, ನಗರ ಪ್ರದೇಶಗಳಿಗೆ ವಲಸೆ ಹೋಗದೆ ನಿಮ್ಮ ಗ್ರಾಮದಲ್ಲೇ ಪ್ರತಿ ಕುಟುಂಬವು 100 ದಿನಗಳ ವರೆಗೆ ನರೇಗಾ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಎಸ್ಪಿ ಡಾ.ವಿ.ಜೆ.ಶೋಭಾರಾಣಿ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ತೊಡಗಿದ್ದಾರೆ. ಸಾಧಿಸುವ ಛಲ ಹೊಂದಬೇಕು. ಯಾವುದೇ ಸಮಯದಲ್ಲಿ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಉತ್ತಮ ಮತ್ತು ವಿಶೇಷವಾಗಿ ಕೆಲಸ ನಿರ್ವಹಿಸುತ್ತಿರುವ ವಿವಿಧ ತಾಲೂಕುಗಳಿಗೆ ಮೂರು ಗ್ರಾಪಂ ಮಟ್ಟದ ಒಕ್ಕೂಟಗಳು ಮತ್ತು ಮೂರು ಸ್ವ ಸಹಾಯ ಗುಂಪುಗಳಿಗೆ ಅವರು ನಿರ್ವಹಿಸುತ್ತಿರುವ ವಿವಿಧ ಚಟುವಟಿಕೆ, ಪ್ರಗತಿ ಸಾಧಿಸಿದ ಆಧಾರದ ಮೇರೆಗೆ ಪುರಸ್ಕಾರ, ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ಸಂಡೂರು ತಾಲೂಕಿನ ದರೋಜಿ ಗ್ರಾಮದ ಅಕ್ಕಮಹಾದೇವಿ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟ ಪ್ರಥಮ, ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಮೆಟ್ರಿ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟ- ದ್ವಿತೀಯ, ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಕೊಟ್ಟೂರೇಶ್ವರ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟ- ತೃತೀಯ ಸ್ಥಾನ ಪಡೆದಿದೆ.