ದೇಶದ ಸಮಗ್ರತೆಗೆ ಒಟ್ಟಾಗಿ ಶ್ರಮಿಸಿ

Published on

ಬಳ್ಳಾರಿ ; ದೇಶಕ್ಕಾಗಿ ಮಹಾನ್ ಹೋರಾಟಗಾರರ ತ್ಯಾಗ, ಬಲಿದಾನಗಳ ಪ್ರತೀಕವೇ ಸ್ವಾತಂತ್ರೃಆಗಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಹೇಳಿದರು.

ನಗರದ ಬಿಮ್ಸ್ ಮೈದಾನದಲ್ಲಿ 79ನೇ ಸ್ವಾತಂತ್ರೃ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ರಾಷ್ಟ್ರೀಯ ಐಕ್ಯತೆ ಹಾಗೂ ರಕ್ಷಣೆ ಮತ್ತು ದೇಶದ ಸಮಗ್ರತೆಗೆ ಎಲ್ಲರೂ ಒಟ್ಟಾಗಿ ಶ್ರಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಭಾರತ ದೇಶವು ವಿವಿಧತೆಯಲ್ಲಿ ಏಕತೆ ಹೊಂದಿದ ರಾಷ್ಟವಾಗಿದೆ. ದೇಶದಲ್ಲಿ ಸ್ವಾತಂತ್ರೃ, ಸಮಾನತೆ, ಭ್ರಾತೃತ್ವ ಭಾವನೆಗಳು ಇವೆ ಎಂದರೆ ಅದು ಸಂವಿಧಾನ ನಮಗೆ ನೀಡಿರುವ ಕೊಡುಗೆಯಾಗಿದೆ. ವಿಶ್ವದಲ್ಲಿಯೇ ಅತ್ಯಂತ ಜೀವಂತವೆನಿಸಿದ ಹಾಗೂ ಅತೀ ದೊಡ್ಡದಾದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ನಮ್ಮ ದೇಶವು ನಡೆಸಿಕೊಂಡು ಬಂದಿದೆ. ಇದಕ್ಕಾಗಿ ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಲೇಬೇಕು ಎಂದು ಹೇಳಿದರು.

ಸ್ವಾತಂತ್ರೃ ಹೋರಾಟದಲ್ಲಿ ಜಿಲ್ಲೆಯು ತನ್ನದೇ ಆದ ಮಹತ್ತರ ಕಾಣಿಕೆ ನೀಡಿದೆ. ಭಾಷಾ ಭೇದವನ್ನು ಮರೆತು, ಸ್ವಾತಂತ್ರೃ ಹೋರಾಟದಲ್ಲಿ ಧುಮುಕಿದ ಅನೇಕ ಹೋರಾಟಗಾರರನ್ನು ನೆನೆಯಬೇಕು ಎಂದು ಸ್ಮರಿಸಿದರು.

ರಾಜ್ಯ ಸರ್ಕಾರವು ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಮಧ್ಯವರ್ತಿಗಳಿಲ್ಲದೇ ಬಡವರಿಗೆ, ಜನ ಸಾಮಾನ್ಯರಿಗೆ ಯಶಸ್ವಿಯಾಗಿ ತಲುಪಿಸಿದ್ದೇವೆ. ಸಾಕಷ್ಟು ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದರು.

ನಗರಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಮೃತ ನಗರೋತ್ಥಾನ, ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ, ಸ್ವಚ್ಛ ಭಾರತ ಮಿಷನ್, ಅಮೃತ 2.0 ಯೋಜನೆ ಮತ್ತು 15ನೇ ಹಣಕಾಸು ಯೋಜನೆಗಳ ಮೂಲಕ ಪ್ರಗತಿ ಸಾಧಿಸಲಾಗಿದೆ. ನಮ್ಮ ಸರ್ಕಾರ ಕೂಲಿ ಕಾರ್ಮಿಕರ, ರೈತರ, ಬಡಜನರ, ಬಡವಿದ್ಯಾರ್ಥಿಗಳ ಹಸಿವು ನೀಗಿಸಲು ಹೆಚ್ಚುವರಿ 200 ಇಂದಿರಾ ಕ್ಯಾಂಟಿನ್‌ಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಬಳಿಕ ವಿವಿಧ ಇಲಾಖೆ ಮತ್ತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳನ್ನೊಳಗೊಂಡ 31 ತುಕಡಿಗಳಿಂದ ಶಿಸ್ತುಬದ್ಧ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ, ಗೌರವಿಸಲಾಯಿತು. ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಸ್ವಾತಂತ್ರೋತ್ಸವದ ನಿಮಿತ್ತ ಸಾಮೂಹಿಕ ನೃತ್ಯ, ದೇಶ ಭಕ್ತಿಗೀತೆ, ಗಾಯನ ಮತ್ತು ವೇಷಧಾರಿಗಳಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವೇದಿಕೆ ಕಾರ್ಯಕ್ರಮಕ್ಕೂ ರೈಲು ನಿಲ್ದಾಣ ಹಾಗೂ ಬಿಮ್ಸ್ ಮೈದಾನದ ಬಳಿಯ ಗಾಂಧೀಜಿ ಪ್ರತಿಮೆಗಳಿಗೆ ಮಾರ್ಲಾಪಣೆ ಮತ್ತು ಗವಿಯಪ್ಪ ವೃತ್ತದಲ್ಲಿನ ಬೃಹತ್ ಧ್ವಜಸ್ತಂಭದ ಧ್ವಜಾರೋಹಣ ನೆರವೇರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net