ಬೆಳ್ತಂಗಡಿಯಿಂದ ಬೆಂಗಳೂರು ಪಾದಯಾತ್ರೆ

KRSParty
Published on

ಭದ್ರಾವತಿ: ಸೌಜನ್ಯಾ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಕೆಆರ್‌ಎಸ್ ಪಕ್ಷದಿಂದ ಆ.26ರಿಂದ ಬೆಳ್ತಂಗಡಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಮೀರ್ ಹೇಳಿದರು.

2012ರಲ್ಲಿ ಕೊಲೆಯಾದ ಸೌಜನ್ಯಾ ಪ್ರಕರಣದ ಆರೋಪಿಗಳಿಗೆ ಇನ್ನೂ ಶಿಕ್ಷೆ ಆಗಿಲ್ಲ. ಈ ನಿಟ್ಟಿನಲ್ಲಿ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಸೆ.8ರಂದು ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಳ್ತಂಗಡಿಯಿಂದ ಆರಂಭವಾಗುವ ಪಾದಯಾತ್ರೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಮಂಡ್ಯ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಮೂಲಕ ಬೆಂಗಳೂರು ತಲುಪಲಿದೆ ಎಂದರು. ಪಕ್ಷದ ತಾಲೂಕು ಅಧ್ಯಕ್ಷ ನಾಗರಾಜರಾವ್ ಸಿಂಧೆ ಮಾತನಾಡಿ, ಇತ್ತೀಚೆಗೆ ರಾಜ್ಯದಲ್ಲಿ ಪೊಲೀಸರು ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ. ಕಾನೂನಿನ ಭಯ ಇಲ್ಲವಾಗಿದೆ. ಇದರಿಂದಾಗಿ ಮತ್ತಷ್ಟು ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಎಚ್ಚರಿಸುವ ಸಲುವಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ತೀರ್ಥ ಕುಮಾರ್, ಯೋಗಾನಂದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net