

ಬೇಲೂರು: ಸಂವಿಧಾನದ ಆಶಯಗಳಿಗೆ ಗೌರವಿಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ತಾಲೂಕಿನ ಹಗರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಡಾ.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಹೋಬಳಿಯ ವಿವಿಧ ಗ್ರಾಮಗಳಲ್ಲಿ ಏಳು ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಪ್ರತಿಯೊಬ್ಬರೂ ಪಕ್ಷಾತೀತವಾಗಿ ಒಗ್ಗೂಡಿ ಭವನಗಳ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಬೇಲೂರಿನ ಅಂಬೇಡ್ಕರ್ ಭವನದ ಕಾಮಗಾರಿ ಇನ್ನಷ್ಟು ಬಾಕಿ ಇದ್ದು, ಶೀಘ್ರವೇ ಕೆಲಸ ಪೂರ್ಣಗೊಳಿಸಲಾಗುವುದು. ಅದೇ ರೀತಿಯಲ್ಲಿ ಹಗರೆಯಲ್ಲೂ ಉತ್ತಮ ಕಟ್ಟಡ ನಿರ್ಮಿಸಿ, ಆದಷ್ಟು ಬೇಗ ಸೇವೆಗೆ ನೀಡಲಾಗುವುದು ಎಂದರು. ಹಗರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡಿ. ಶಾಂತ ಕುಮಾರ್ ಮಾತನಾಡಿ, ಶಾಸಕರು ಚುನಾವಣೆ ಸಂದರ್ಭ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಅವರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರನ್ನು ಭೇಟಿಮಾಡಿ, ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಲಾಗಿದೆ. ಈ ನಿಟ್ಟಿನಲ್ಲಿ ಶಾಸಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.