ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ವ್ಯವಸ್ಥೆ ಜಾರಿಯಾದ ಬಳಿಕ ಪೂರ್ವ ನಗರ ಪಾಲಿಕೆಗೆ ಸ್ವತಂತ್ರ ಆಡಳಿತ ವ್ಯವಸ್ಥೆ, ಪ್ರತ್ಯೇಕ ಬಜೆಟ್ ಹಾಗೂ ಸ್ಥಳೀಯ ಅಗತ್ಯಗಳಿಗೆ ತ್ವರಿತವಾಗಿ ಸ್ಪಂದಿಸುವ ಅವಕಾಶ ದೊರೆತಿದೆ. ಇದರಿಂದಾಗಿ ಪಾರದರ್ಶಕ, ಹೊಣೆಗಾರಿಕೆಯ ಹಾಗೂ ಜನಸ್ನೇಹಿ ಆಡಳಿತವನ್ನು ರೂಪಿಸುವತ್ತ ಕಾರ್ಪೋರೇಷನ್ ಬದ್ಧವಾಗಿದೆ ಎಂದು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ತಿಳಿಸಿದರು.
ಪೂರ್ವ ನಗರ ಪಾಲಿಕೆ ಮತ್ತು ವಾರ್ಡ್ ಸಮಿತಿಗಳ ಸಹಯೋಗದಲ್ಲಿ ವೈಟ್‌ಫೀಲ್ಡ್ ರೈಸಿಂಗ್ ಸಂಘಟನೆ ಭಾನುವಾರ ಆಯೋಜಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಅವರು, ಪೂರ್ವ ಬೆಂಗಳೂರಿನ ಅಭಿವೃದ್ಧಿಗೆ ರೂಪಿಸಿರುವ ಯೋಜನೆಗಳು, ಆಡಳಿತಾತ್ಮಕ ಸುಧಾರಣೆ ಹಾಗೂ ಭವಿಷ್ಯದ ಕಾರ್ಯತಂತ್ರಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
3,900 ಕೋಟಿ ಅಭಿವೃದ್ಧಿ ಬಜೆಟ್:
ಪ್ರಸಕ್ತ ಸಾಲಿನಲ್ಲಿ ಅಂದಾಜು 3,900 ಕೋಟಿ ರೂ. ಮೊತ್ತದ ಬಜೆಟ್ ರೂಪಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದೊಂಗೆ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆಡಳಿತ ವೆಚ್ಚಗಳನ್ನು ನಿಯಂತ್ರಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಅಧಿಕ ಅನುದಾನ ಮೀಸಲಿಡುವುದರೊಂದಿಗೆ ಅಭಿವೃದ್ಧಿ ಕಾರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಪಾಲಿಕೆಯಿಂದ ನಡೆಯುವ ಪ್ರತಿಯೊಂದು ಅಭಿವೃದ್ಧಿ ಕಾಮಗಾರಿಯ ವೆಚ್ಚ, ಪ್ರಗತಿ, ಗುಣಮಟ್ಟ ಹಾಗೂ ಅನುಷ್ಠಾನದ ಮಾಹಿತಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಡಿಜಿಟಲ್ ಡ್ಯಾಶ್‌ಬೋರ್ಡ್ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ನಾಗರಿಕರು ಕಾಮಗಾರಿಗಳ ಮೇಲ್ವಿಚಾರಣೆಯಲ್ಲಿ ನೇರವಾಗಿ ಭಾಗವಹಿಸುವ ಅವಕಾಶ ಸಿಗಲಿದೆ ಎಂದು ಅವರು ತಿಳಿಸಿದರು.
ಜಲಮಂಡಳಿ, ಬೆಸ್ಕಾಂ, ಕೆಪಿಟಿಸಿಎಲ್, ಗೇಲ್, ಸಂಚಾರಿ ಪೊಲೀಸ್ ಹಾಗೂ ಇನ್ನಿತರೆ ಸೇವಾ ಪೂರೈಕೆದಾರ ಸಂಸ್ಥೆಗಳು ಸೇರಿ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಸಮನ್ವಯಗೊಳಿಸಲು ಹೊಸ ಡಿಜಿಟಲ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಆಯುಕ್ತರು ವಿವರಿಸಿದರು.
ಸಂವಾದದಲ್ಲಿ ಪೂರ್ವ ಪಾಲಿಕೆಯ ಅಪರ ಆಯುಕ್ತರು (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್, ಬಿಎಂಟಿಸಿ, ಜಲಮಂಡಳಿ, ಬೆಸ್ಕಾಂ, ಸಂಚಾರ ಪೊಲೀಸ್ ಇಲಾಖೆ ಸೇರಿ ವಿವಿಧ ನಾಗರಿಕ ಸೇವಾ ಸಂಸ್ಥೆಗಳ ಹಿರಿಯ ಅಧಿಕಾರಿಗಳು, ವಾರ್ಡ್ ಸಮಿತಿ ಸದಸ್ಯರು, ವೈಟ್‌ಫೀಲ್ಡ್ ರೈಸಿಂಗ್ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಂವಾದದಲ್ಲಿ ನೀಡಿದ ಭರವಸೆಯ ಪ್ರಮುಖಾಂಶ:
* ಪ್ರವಾಹ ಸಮಸ್ಯೆಗೆ ಶಾಶ್ವತ ಪರಿಹಾರ
* ಘನತ್ಯಾಜ್ಯ ನಿರ್ವಹಣೆಗೆ ಹೊಸ ಕ್ರಮ
* ಮೂಲದಲ್ಲೇ ಕಸದ ವಿಂಗಡಣೆಗೆ ಒತ್ತು
* ಅಕ್ರಮ ಕಟ್ಟಡಗಳಿಗೆ ಕಡಿವಾಣ
* ವಾರ್ಡ್ ಸಮಿತಿಗಳಿಗೆ ಹೆಚ್ಚಿನ ಅಧಿಕಾರ
ಸಂಚಾರ ದಟ್ಟಣೆ ನಿವಾರಣೆಗೆ ಆದ್ಯತೆ:
ಪಣತ್ತೂರು, ಗುಂಜೂರು, ಕಾರ್ಮೇಲರಾಂ ಸೇರಿ ಪ್ರಮುಖ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಭೂಸ್ವಾಧೀನ, ಟಿಡಿಆರ್ ಪ್ರಕ್ರಿಯೆಗೆ ವೇಗ ನೀಡಲಾಗುತ್ತಿದೆ. ಪ್ರಮುಖ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಟ್ಟು ಸಂಚಾರ ದಟ್ಟಣೆ ಕಡಿಮೆ ಮಾಡುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ ಎಂದು ಆಯುಕ್ತರು ತಿಳಿಸಿದರು.