ಪೂರ್ವ ಸಿದ್ಧತೆಯೊಂದಿಗೆ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಿ

footpath-encroachment
footpath-encroachment
Published on

ಪ್ರಮುಖ ಮುಖ್ಯಾಂಶಗಳು

  • ಪಾಲಿಕೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ನಿರ್ದೇಶನ
  • ಬೀದಿ ವ್ಯಾಪಾರಿಗಳಿಗೆ ಜೀವನ ನಡೆಸಲು ಮುಕ್ತ ಅವಕಾಶದ ಅಭಯ
ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಂಡು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಜು.1ರಿಂದ ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ ಕೈಗೆತ್ತಿಕೊಳ್ಳುವ ಸಂಬಂಧ ಸೋಮವಾರ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವ ವೇಳೆ ಸುಪ್ರೀಂಕೋರ್ಟ್ ಆದೇಶ ಹಾಗೂ ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣಾ ಕಾಯ್ದೆಯನ್ನು ಪಾಲಿಸಬೇಕು. ಸಮಗ್ರ ಯೋಜನೆ ರೂಪಿಸಿಕೊಂಡು, ಅಗತ್ಯ ಪೂರ್ವಸಿದ್ಧತೆಯೊಂದಿಗೆ ಕಾರ್ಯಾಚರಣೆ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಒತ್ತುವರಿ ತೆರವು ಕಾರ್ಯಾಚರಣೆಯ ವೇಳೆ ಪಾಲಿಕೆಯ ಅಧಿಕಾರಿಗಳು, ಉದ್ದಿಮೆ ಪರವಾನಗಿ ನೀಡುವ ಆರೋಗ್ಯಾಧಿಕಾರಿಗಳು, ಭದ್ರತೆಗಾಗಿ ಪೊಲೀಸ್ ಸಿಬ್ಬಂದಿ ಹಾಗೂ ಒತ್ತುವರಿ ತೆರವು ತಂಡಗಳ ಸಮನ್ವಯದೊಂದಿಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.


ನಾನ್ ವೆಂಡಿಂಗ್ ವಲಯಕ್ಕೆ ಅಧಿಸೂಚನೆ ಹೊರಡಿಸಿ:

ನಗರದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳು ಸೇರಿ ಪ್ರಮುಖ ರಸ್ತೆಗಳನ್ನು ನಾನ್ ವೆಂಡಿಂಗ್ ವಲಯಗಳಾಗಿ ಅಧಿಸೂಚನೆ ಹೊರಡಿಸಬೇಕು. ನಗರದಲ್ಲಿ ಸುಮಾರು 15 ಸಾವಿರ ಕಿ.ಮೀ. ಉದ್ದ ರಸ್ತೆಗಳಿದ್ದು, ಅವುಗಳಲ್ಲಿ 1,500 ಕಿ.ಮೀ. ರಸ್ತೆಗಳನ್ನು ನಾನ್ ವೆಂಡಿಂಗ್ ವಲಯಗಳಾಗಿ ಗುರುತಿಸಬೇಕು. ಉಳಿದ ರಸ್ತೆಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ವ್ಯಾಪಾರ ನಡೆಸಲು ಬೀದಿ ವ್ಯಾಪಾರಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಎಂ.ಮಹೇಶ್ವರ ರಾವ್, ನಗರ ಪಾಲಿಕೆಗಳ ಆಯುಕ್ತರಾದ ಡಿ.ಎಸ್. ರಮೇಶ್, ಪಿ.ಸುನೀಲ್ ಕುಮಾರ್, ಜಿ.ಜಗದೀಶ್, ಕೆ.ಎನ್. ರಮೇಶ್, ಡಾ. ಕೆ.ವಿ. ರಾಜೇಂದ್ರ, ಸಂಚಾರ ಪೊಲೀಸ್ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
"

ನಗರದಲ್ಲಿ ಬೀದಿ ವ್ಯಾಪಾರಿಗಳು ಜೀವನ ನಡೆಸಲು ಮುಕ್ತ ಅವಕಾಶವಿದೆ. ಪಾಲಿಕೆ ಗುರುತಿಸುವ ನಾನ್ ವೆಂಡಿಂಗ್ ವಲಯಗಳ ರಸ್ತೆಗಳನ್ನು ಹೊರತುಪಡಿಸಿ ಉಳಿದ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಮುಕ್ತವಾಗಿ ವ್ಯಾಪಾರ ನಡೆಸಬಹುದು.

- ಕೃಷ್ಣ ಬೈರೇಗೌಡ, ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net