ಪಲ್ಸ್ ಪೋಲಿಯೋ ಯಶಸ್ವಿಗೆ ಸಮನ್ವಯ ಸಾಧಿಸಿ

pulse-polio
pulse-polio
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಸೂಚನೆ ನೀಡಿದ ಆಯುಕ್ತ ಸುನೀಲ್ ಕುಮಾರ್
  • ಉತ್ತರ ನಗರ ಪಾಲಿಕೆಯಲ್ಲಿ ಕಾರ್ಯಪಡೆ ಸಭೆ ಆಯೋಜನೆ
ಬೆಂಗಳೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ -2026 ಕಾರ್ಯಕ್ರಮವನ್ನು ಯಶಸ್ವಿಯಾಗಿ ಜಾರಿಗೊಳಿಸುವ ಸಂಬಂಧ ಉತ್ತರ ನಗರ ಪಾಲಿಕೆ ಆಯುಕ್ತ ಪಿ.ಸುನೀಲ್ ಕುಮಾರ್ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆಯ ಕಚೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ಸಮನ್ವಯ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಪೋಲಿಯೋ ಹನಿ ಹಾಕುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಸ್ವಯಂಸೇವಾ ಸಂಸ್ಥೆಗಳು ಹಾಗೂ ಅಪಾರ್ಟ್‌ಮೆಂಟ್ ಸಂಘಗಳ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

ಜೂ.28ರಿಂದ ಪಲ್ಸ್ ಪೋಲಿಯೋ:

ಮುಂಬರುವ ಜೂ.28ರಂದು ಬೂತ್ ದಿನ ಆಚರಿಸಲಾಗುತ್ತಿದ್ದು, ಸ್ಥಳೀಯವಾಗಿಯೇ ಅತಿಹೆಚ್ಚು ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುತ್ತದೆ. ಜೂ.29, 30 ಹಾಗೂ ಜು.1ರಂದು ಮನೆ-ಮನೆ ಭೇಟಿ ಮೂಲಕ ಲಸಿಕೆ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಕಳೆದ ಕೆಲವು ವರ್ಷಗಳಲ್ಲಿ ಜನರ ವಲಸೆ ಹೆಚ್ಚುತ್ತಿರುವ ಹಿನ್ನೆಲೆ ಪೋಲಿಯೋ ಸೋಂಕಿನ ಅಪಾಯವನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರೀಯ ಪಲ್ಸ್ ಪೋಲಿಯೋಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಕಳೆದ ವರ್ಷದ ಅಭಿಯಾನದಲ್ಲಿ ಉತ್ತರ ಪಾಲಿಕೆಯ 2,70,579 ಮಕ್ಕಳಿಗೆ ಲಸಿಕೆ ನೀಡಿದ್ದು, ಶೇ.100.10 ಸಾಧನೆ ದಾಖಲಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಕಾರ್ಯಕ್ರಮ ಅನುಷ್ಠಾನಕ್ಕಾಗಿ ಸಿದ್ಧತೆ:

ಪಲ್ಸ್ ಪೋಲಿಯೋ ಯಶಸ್ವಿ ಅನುಷ್ಠಾನಕ್ಕಾಗಿ ಲಸಿಕೆದಾರರು, ಮೇಲ್ವಿಚಾರಕರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗೆ ತರಬೇತಿ, ಲಸಿಕೆ ಮತ್ತು ಅಗತ್ಯ ಸಾಮಗ್ರಿಗಳ ವಿತರಣೆ, ಜನಜಾಗೃತಿ, ಮಾಧ್ಯಮ ಮಾಹಿತಿ, ಸಿದ್ಧತಾ ಪರಿಶೀಲನೆ ಸೇರಿ ವಿವಿಧ ಚಟುವಟಿಕೆ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡರು.
ಅಂಗನವಾಡಿ ಕೇಂದ್ರಗಳನ್ನು ತೆರೆದಿಡುವುದು, ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವುದು, ನವಜಾತ ಶಿಶುಗಳನ್ನು ಗುರುತಿಸುವುದು, ತಾಯಂದಿರ ಸಭೆಗಳಲ್ಲಿ ಜಾಗೃತಿ ಮೂಡಿಸುವುದು ಹಾಗೂ ಸ್ತ್ರೀಶಕ್ತಿ ಸಂಘಗಳನ್ನು ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವಂತೆ ಆಯುಕ್ತರು ಸೂಚಿಸಿದರು.
ಸಭೆಯಲ್ಲಿ ಅಪರ ಆಯುಕ್ತೆ (ಕಂದಾಯ ವಿಭಾಗ) ಪಲ್ಲವಿ, ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೊಮಿನ್, ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಶಿಕ್ಷಣ ಇಲಾಖೆ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net