ಜಿಬಿಎ ವ್ಯಾಪ್ತಿಯಲ್ಲಿ ಕಸ, ತ್ಯಾಜ್ಯ, ಕಟ್ಟಡ ಭಗ್ನಾವಶೇಷಗಳು, ಮಣ್ಣಿನ ಗುಡ್ಡೆಗಳು, ಕಳೆ ಸೇರಿ ಇತರೆ ತ್ಯಾಜ್ಯಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವ ಉದ್ದೇಶದಿಂದ ಆಗಸ್ಟ್ ತಿಂಗಳ ಪೂರ್ತಿ "ಕಸದಿಂದ ಸ್ವಾತಂತ್ರ್ಯ' ಅಭಿಯಾನ ಹಮ್ಮಿಕೊಳ್ಳಲು ಯೋಜನೆ ರೂಪಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ.
ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ಕಂದಾಯ ವಿಭಾಗಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಬೆಂಗಳೂರಿನ ಸೌಂದರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪಾಲಿಕೆ, ಕೆ-&ರೈಡ್, ರೈಲ್ವೆ, ಮೆಟ್ರೋ ಸೇರಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಆಗಸ್ಟ್ನಲ್ಲಿ ಅಭಿಯಾನ ನಡೆಸಲು ಕ್ರಮವಹಿಸಬೇಕು. ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ವತಿಯಿಂದ 1,616 ಸ್ಥಳಗಳಲ್ಲಿ 22,732 ಟನ್ ತ್ಯಾಜ್ಯ ಗುರುತಿಸಲಾಗಿದ್ದು, ಅದನ್ನು ತೆರವುಗೊಳಿಸಲು ಸಮಗ್ರ ಯೋಜನೆ ರೂಪಿಸಲು ತಾಕೀತು ಮಾಡಿದರು.
ಮನೆ-&ಮನೆಗೆ ಇ-&ಖಾತೆ:
ಜಿಬಿಎ ವ್ಯಾಪ್ತಿಯಲ್ಲಿರುವ ಸುಮಾರು 23 ಲಕ್ಷ ಆಸ್ತಿಗಳಿಗೆ ಸರ್ಕಾರದಿಂದಲೇ ಮನೆ-&ಮನೆಗೆ ಇ-&ಖಾತೆಗಳನ್ನು ವಿತರಿಸಲು ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಆಸ್ತಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಲು ಕ್ರಮವಹಿಸಬೇಕು. ಕಡಿಮೆ ಆಸ್ತಿ ತೆರಿಗೆ ಪಾವತಿಸುತ್ತಿರುವ ಪ್ರಕರಣಗಳನ್ನು ಪತ್ತೆಹಚ್ಚಿ, ತೆರಿಗೆ ಪರಿಷ್ಕರಣೆ ಮಾಡಿ ಸಮರ್ಪಕವಾಗಿ ಆಸ್ತಿ ತೆರಿಗೆ ಸಂಗ್ರಹಿಸಬೇಕು ಎಂದರು.
ಜಿಬಿಎ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೆ ಖಾತೆ ಮಾಡಿಕೊಟ್ಟು, ಆಸ್ತಿ ತೆರಿಗೆಯನ್ನು ಪರಿಣಾಮಕಾರಿಯಾಗಿ ಸಂಗ್ರಹಿಸುವ ಕೆಲಸ ಮಾಡಬೇಕು. ಬಿ&-ಖಾತೆಯಿಂದ ಎ&-ಖಾತೆಗೆ ಪರಿವರ್ತನೆ ಮಾಡುವ ಪ್ರಕ್ರಿಯೆಗೆ ವೇಗ ನೀಡಬೇಕು. ಜಿಐಎಸ್, ಡ್ರೋನ್ ಹಾಗೂ ಇತರೆ ತಂತ್ರಜ್ಞಾನಗಳನ್ನು ಬಳಸಿಕೊಂಡು ಬೆಸ್ಕಾಂ, ಜಲಮಂಡಳಿ ಸೇರಿ ವಿವಿಧ ಇಲಾಖೆಗಳಲ್ಲಿರುವ ಆಸ್ತಿಗಳ ಮಾಹಿತಿಯನ್ನು ಏಕೀಕರಿಸಿ, ವ್ಯಾಪ್ತಿಗೆ ಒಳಪಡದಿರುವ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಬೇಕು ಎಂದು ತಿಳಿಸಿದರು.
ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್, ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಹಾಗೂ ನಿತೀಶ್, ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್, ಪಿ. ಸುನೀಲ್ ಕುಮಾರ್, ಜಿ. ಜಗದೀಶ್, ಕೆ.ಎನ್.ರಮೇಶ್, ಡಾ.ಕೆ.ವಿ. ರಾಜೇಂದ್ರ, ಅಪರ ಆಯುಕ್ತರು, ಜಂಟಿ ಆಯುಕ್ತರು, ಉಪ ಆಯುಕ್ತರಿದ್ದರು.
ಖಾಲಿ ಜಾಗಗಳನ್ನು ಸ್ವಚ್ಛಗೊಳಿಸಿ
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಖಾಲಿ ಜಾಗಗಳಲ್ಲಿ ಬೆಳೆದಿರುವ ಕಳೆ, ಗಿಡ-ಗಂಟಿಗಳು ಹಾಗೂ ತ್ಯಾಜ್ಯವನ್ನು ಸ್ವತ್ತಿನ ಮಾಲೀಕರೇ ತೆರವುಗೊಳಿಸಿಕೊಳ್ಳಲು ಆ. 15ರವರೆಗೆ ಕಾಲಾವಕಾಶ ನೀಡಲಾಗುವುದು. ಬಳಿಕವೂ ತೆರವುಗೊಳಿಸದಿದ್ದರೆ, ಪಾಲಿಕೆಯಿಂದ ತೆರವುಗೊಳಿಸಿ ಅದರ ವೆಚ್ಚವನ್ನು ಆಸ್ತಿ ತೆರಿಗೆಗೆ ಸೇರಿಸಿ ವಸೂಲಿ ಮಾಡಲಾಗುವುದು ಎಂದು ಕೃಷ್ಣಬೈರೇಗೌಡ ತಿಳಿಸಿದರು. ಕಟ್ಟಡದ ಭಗ್ನಾವಶೇಷಗಳನ್ನು ವಿಲೇವಾರಿ ಮಾಡುವ ಎಲ್ಲ ವಾಹನಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಜತೆಗೆ, ವಾಹನಗಳಲ್ಲಿ ಜಿಪಿಎಸ್ ಅಳವಡಿಕೆ ಕಡ್ಡಾಯವಾಗಿರಬೇಕು ಎಂದು ಸೂಚಿಸಿದರು.
ದುಪ್ಪಟ್ಟು ದಂಡ
ಜಿಬಿಎ ವ್ಯಾಪ್ತಿಯಲ್ಲಿ ಸುಮಾರು 1,500 ಬೀದಿ ವ್ಯಾಪಾರಿಗಳಿಗೆ ಮಾತ್ರ ಸ್ಥಳಾಂತರದ ಅಗತ್ಯ ಉಂಟಾಗಿದ್ದು, 10 ಸಾವಿರಕ್ಕೂ ಹೆಚ್ಚು ಅಂಗಡಿಗಳ ವಿವಿಧ ರೀತಿಯ ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಪಾದಚಾರಿ ಮಾರ್ಗಗಳನ್ನು ತೆರವುಗೊಳಿಸಿದ ರಸ್ತೆಗಳಲ್ಲಿ ಮತ್ತೆ ಒತ್ತುವರಿ ಮಾಡಿದರೆ ದುಪ್ಪಟ್ಟು ದಂಡ ವಿಧಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.
ಅನಧಿಕೃತ ಜಾಹೀರಾತು ತೆರವುಗೊಳಿಸಿ
ನಗರದಲ್ಲಿ ಹೊಸ ಜಾಹೀರಾತು ನೀತಿ ಜಾರಿಗೆ ಬಂದ ನಂತರ ಅನಧಿಕೃತವಾಗಿ ಡಿಜಿಟಲ್ ಜಾಹೀರಾತುಗಳನ್ನು ಅಳವಡಿಸಲಾಗುತ್ತಿದೆ. ಪರವಾನಗಿ ಇಲ್ಲದೆ ಅಳವಡಿಸಿರುವ ಜಾಹೀರಾತುಗಳನ್ನು ಮುಲಾಜಿಲ್ಲದೆ ತೆರವುಗೊಳಿಸಬೇಕು. ಪರವಾನಗಿ ಪಡೆದು ಜಾಹೀರಾತು ಅಳವಡಿಸಿರುವವರೂ, ಅನುಮೋದಿತ ಉದ್ದೇಶಕ್ಕಿಂತ ಭಿನ್ನವಾಗಿ ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.