ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) 2026ರ ಹಿನ್ನೆಲೆಯಲ್ಲಿ ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್, ವಿಶೇಷ ಆಯುಕ್ತೆ ಸುಷಮಾ ಗೋಡಬೋಲೆ ಇದ್ದರು.
ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ತಿಳಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) 2026ರ ಹಿನ್ನೆಲೆಯಲ್ಲಿ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ಎಸ್ಐಆರ್ ಸಂಬಂಧಿತ ಯಾವುದೇ ಮಾಹಿತಿ, ಸಮಸ್ಯೆ ಅಥವಾ ಅನುಮಾನಗಳಿದ್ದಲ್ಲಿ ಸಾರ್ವಜನಿಕರು 1950 ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರಿಂದ ಸ್ವೀಕರಿಸುವ ಸಮಸ್ಯೆಗಳನ್ನು ದಾಖಲಿಸಿಕೊಂಡು, ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಎಇಆರ್ಒಗಳು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಖಚಿತಪಡಿಸಿಕೊಳ್ಳಬೇಕು. ಎಸ್ಐಆರ್ ಪ್ರಕ್ರಿಯೆಯನ್ನು ನಿಯಮಾನುಸಾರ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಸೂಚಿಸಿದ ಅವರು, ಕರ್ತವ್ಯ ನಿರ್ವಹಣೆಯಲ್ಲಿ ರ್ನಿಲಕ್ಷ್ಯ ವಹಿಸುವ ಅಥವಾ ಸಮರ್ಪಕವಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎಸ್ಐಆರ್ ಪ್ರಕ್ರಿಯೆ ಪಾರದರ್ಶಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಯಲು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರು ಚುನಾವಣಾ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಮಹೇಶ್ವರ ರಾವ್ ಅವರು ಮನವಿ ಮಾಡಿದರು.
ಎಸ್ಐಆರ್ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎಸ್ಐಆರ್ ಕುರಿತು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ತಲುಪಿಸುವಂತೆ ಸೂಚಿಸಿದರು.
ಸಭೆಯಲ್ಲಿ ನಗರ ಪಾಲಿಕೆ ಆಯುಕ್ತರಾದ ಪಿ. ಸುನೀಲ್ ಕುಮಾರ್, ಕೆ.ಎನ್. ರಮೇಶ್, ಡಾ.ಕೆ.ವಿ. ರಾಜೇಂದ್ರ, ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.