ಇಂಜಿನಿಯರ್‌ಗಳಿಗೆ ಲೋಖಂಡೆ ಸ್ನೇಹಲ್ ಸುಧಾಕರ್ ಖಡಕ್ ಎಚ್ಚರಿಕೆ
ಪೂರ್ವ ಪಾಲಿಕೆಯ ವ್ಯಾಪ್ತಿಯ ವಿವಿಧೆಡೆ ಅಭಿವೃದ್ಧಿ ಕಾರ್ಯ ಪರಿಶೀಲನೆ
ಬೆಂಗಳೂರು: ವಾರ್ಡ್‌ಗಳಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ, ಚರಂಡಿ ನಿರ್ವಹಣೆ, ಡಾಂಬರೀಕರಣ ಹಾಗೂ ಕಾಂಕ್ರೀಟ್ ರಸ್ತೆಗಳ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಪೂರ್ವ ನಗರ ಪಾಲಿಕೆಯ ಅಪರ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್ ಅವರು ಇಂಜಿನಿಯರ್‌ಗಳಿಗೆ ಸೂಚನೆ ನೀಡಿದ್ದಾರೆ.
ಪಾಲಿಕೆಯ ವಿವಿಧ ಪ್ರದೇಶಗಳಲ್ಲಿ ಮಂಗಳವಾರ ಅಭಿವೃದ್ಧಿ ಕಾಮಗಾರಿಗಳ ಸ್ಥಳಪರಿಶೀಲನೆ ನಡೆಸಿದ ವೇಳೆ ಅವರು ಈ ನಿರ್ದೇಶನವನ್ನು ನೀಡಿದರು.
ವಿನಾಯಕ ಲೇಔಟ್‌ನಲ್ಲಿ ರಸ್ತೆ ಬದಿಯ ಚರಂಡಿ ಕಾಮಗಾರಿ ಪರಿಶೀಲನೆ ವೇಳೆ ಅಲ್ಲಿ ಹಾಳಾಗಿರುವ ಸ್ಲ್ಯಾಬ್ಗಳು ಕಂಡುವು. ಇದರ ಬಗ್ಗೆ ಆಕ್ಷೇಪಿಸಿದ ಅವರು, ತಕ್ಷಣ ಹಾಳಾದ ಸ್ಲ್ಯಾಬ್‌ಗಳನ್ನು ದುರಸ್ತಿ ಮಾಡಬೇಕು. ಮಳೆ ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸಬೇಕುಬೇಕು. ಹೊಸ ಚರಂಡಿ ಕಾಮಗಾರಿಯೊಂದಿಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ನೀರಿನ ಸರಾಗ ಹರಿವಿಗೆ ನಿಗಾ ವಹಿಸುವಂತೆ ಸೂಚಿಸಿದರು.
ಮಳೆಗಾಲಕ್ಕೂ ಮುನ್ನ ಕಾಮಗಾರಿ ಪೂರ್ಣಗೊಳಿಸಿ:
ಸರ್ ಎಂ.ವಿಶೇಶ್ವರಯ್ಯ ಬಡಾವಣೆಯಲ್ಲಿ ನಡೆಯುತ್ತಿರುವ ರಸ್ತೆ ಬದಿಯ ಚರಂಡಿ, ಸಿಸಿ ರಸ್ತೆ ಹಾಗೂ ಡಾಂಬರೀಕರಣ ಕಾಮಗಾರಿಗಳನ್ನು ಪರಿಶೀಲಿಸಲಾಯಿತು. ಮಳೆಗಾಲದ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಎಲ್ಲ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಬೋವಿ ಕಾಲೋನಿಯಲ್ಲಿ ರಸ್ತೆ ಹಾಳಾಗಿರುವ ಹಿನ್ನೆಲೆಯಲ್ಲಿ ಜಲಮಂಡಳಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಬಾಕಿ ಉಳಿದಿರುವ ಕುಡಿಯುವ ನೀರು ಹಾಗೂ ಒಳಚರಂಡಿ ಸಂಬಂಧಿತ ಪೈಪ್‌ಲೈನ್ ಕಾಮಗಾರಿಯನ್ನು ಬೇಗನೆ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.
ಚರಂಡಿಗಳಲ್ಲಿ ಹೂಳು ತೆರವುಗೊಳಿಸಿ:
ಎಫ್‌ಸಿಐ ಗೋದಾಮು ರಸ್ತೆ ಹಾಗೂ ರೈಲ್ವೆ ಸಮಾನಾಂತರ ರಸ್ತೆಯ ಪಾದಚಾರಿ ಮಾರ್ಗದಲ್ಲಿನ ಕಾಬಲ್ ಸ್ಟೋನ್‌ಗಳನ್ನು ಸಮರ್ಪಕವಾಗಿ ಅಳವಡಿಸಬೇಕು. ಅಲ್ಲಿ ಸಂಚಾರಕ್ಕೆ ಅನುಕೂಲವಾಗುವ ರೀತಿ ವ್ಯವಸ್ಥೆ ಮಾಡಬೇಕು. ರಸ್ತೆ ಬದಿಯ ಮರಗಳಿಗೆ ಸೂಕ್ತ ಟ್ರೀ ಬೇಸಿನ್‌ಗಳನ್ನು ನಿರ್ಮಿಸುವುದು, ತ್ಯಾಜ್ಯ ಸಾಗಣೆ ವಾಹನಗಳ ನಿಲುಗಡೆ ಸ್ಥಳದಲ್ಲಿ ಲೀಚೇಟ್ ಸಂಗ್ರಹವಾಗದಂತೆ ನಿಗಾ ವಹಿಸಬೇಕು. ಎಫ್‌ಸಿಐ ಗೋದಾಮು ರಸ್ತೆ ಬದಿಯ ಚರಂಡಿಗಳಲ್ಲಿ ಹೂಳನ್ನು ತೆರವುಗೊಳಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ಥಳಪರಿಶೀಲನೆ ವೇಳೆ ಕೆ.ಆರ್. ಪುರ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಅಭಿಯಂತರರು ಹಾಜರಿದ್ದರು.