ಬೆಂಗಳೂರು: ಗಾಂಧಿ ಬಜಾರ್ ಪ್ರದೇಶದಲ್ಲಿನ ದಟ್ಟಣೆ ಹಿನ್ನೆಲೆಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ಮಾಡಲು ಅಕವಾಶ ಮಾಡಿಕೊಡಲು ಲೈನ್ ಮಾರ್ಕಿಂಗ್ ವ್ಯವಸ್ಥೆಯನ್ನು ರೂಪಿಸಲಾಗಿದೆ.
ಕೇಂದ್ರ ನಗರ ಪಾಲಿಕೆಯ ಆಯುಕ್ತ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಗಾಂಧಿ ಬಜಾರ್ ಮುಖ್ಯರಸ್ತೆಯ ವ್ಯಾಪಾರ ಸಮಸ್ಯೆ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಹೈಕೋರ್ಟ್ ಆದೇಶದಂತೆ ಬೀದಿಬದಿ ವ್ಯಾಪಾರಿಗಳಿಗೆ ಪಾದಚಾರಿ ಮಾರ್ಗಗಳಲ್ಲಿ ಈಗಾಗಲೇ ಎರಡೂ ಬದಿಗಳಲ್ಲಿ ಪೇಂಟಿಂಗ್ ಗೆರೆ ಎಳೆದಿದ್ದು, ಲೈನಿಂಗ್ ಮಾರ್ಕ್ ಮಾಡಿ ಗುರುತಿಸಲಾದ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ನಡೆಸಲು ವರ್ತಕರಿಗೆ ಇನ್ನೊಮ್ಮೆ ಸೂಚಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಫುಟ್‌ಪಾತ್ ಒತ್ತುವರಿ ಮಾಡಿ ವ್ಯಾಪಾರ ಮಾಡುವುದರಿಂದ ಪಾದಚಾರಿಗಳ ಸಂಚಾರಕ್ಕೆ ಅಡಚಣೆ ಉಂಟಾಗಲಿದೆ. ವ್ಯಾಪಾರಕ್ಕೆ ಸ್ಥಳ ಗುರುತಿಸಿ ಗೆರೆ ಎಳೆದ ಸ್ಥಳ ಬಿಟ್ಟು ಬೇರೆ ಸ್ಥಳದಲ್ಲಿ ವ್ಯಾಪಾರ ಮಾಡುವವರನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಯುಕ್ತರು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಕೇಂದ್ರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತ ವೆಂಕಟಾಚಲಪತಿ, ಜಂಟಿ ಆಯುಕ್ತ ಹೇಮಂತ್ ಶರಣ್, ಕಾರ್ಯಪಾಲಕ ಅಭಿಯಂತರರು, ಕಲ್ಯಾಣ ವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.