ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಿ

pulse-polio
pulse-polio
Published on

ಪ್ರಮುಖ ಮುಖ್ಯಾಂಶಗಳು

  • ಜಿಬಿಎ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಿಂದ ಅಧಿಕಾರಿಗಳಿಗೆ ಸೂಚನೆ
ಬೆಂಗಳೂರು: ನಗರದಲ್ಲಿ ಭಾನುವಾರ (ಜೂ.28) ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಎರಡು ಹನಿ ಲಸಿಕೆ ಹಾಕಿಸಲು ಪಾಲಕರನ್ನು ವಿನಂತಿಸಬೇಕು ಎಂದು ಜಿಬಿಎ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ವೆಂಕಟಾಚಲಪತಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಕುರಿತು ಗುರುವಾರ ವರ್ಚುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲಸಿಕೆ ಹಾಕಲು ಎಲ್ಲ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು. ಆಯಾ ಪಾಲಿಕೆಗಳ ವ್ಯಾಪ್ತಿಯಲ್ಲಿ ಹೊಣೆ ಹೊತ್ತಿರುವ ಅಧಿಕಾರಿಗಳು ತಮಗೆ ವಹಿಸಿರುವ ಕಾರ್ಯವನ್ನು ಸಮನ್ವಯದೊಂದಿಗೆ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಪೋಲಿಯೋ ಬೂತ್‌ಗಳ ಸ್ಥಾಪನೆ:

ಜಿಬಿಎ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ), ನಮ್ಮ ಕ್ಲಿನಿಕ್, ಹೆರಿಗೆ ಆಸ್ಪತ್ರೆ, ನಗರ ಕುಟುಂಬ ಕಲ್ಯಾಣ ಕೇಂದ್ರ, ಔಷಧಾಲಯ, ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಲ್ಲಿ ಪೋಲಿಯೋ ಬೂತ್‌ಗಳನ್ನು ಸ್ಥಾಪಿಸಲಾಗಿದೆ. ಜತೆಗೆ ಬಸ್ ನಿಲ್ದಾಣ, ರೈಲು ನಿಲ್ದಾಣ, ಮೆಟ್ರೋ ನಿಲ್ದಾಣ, ಸ್ವಯಂಸೇವಾ ಸಂಸ್ಥೆಗಳ ಆಸ್ಪತ್ರೆಗಳು, ಖಾಸಗಿ ನರ್ಸಿಂಗ್ ಹೋಮ್, ವೈದ್ಯಕೀಯ ಮಹಾವಿದ್ಯಾಲಯಗಳು ಹಾಗೂ ಕೊಳಚೆ ಪ್ರದೇಶಗಳಂತಹ ಜನನಿಬಿಡ ಸ್ಥಳಗಳಲ್ಲಿ ಸ್ಥಿರ ಹಾಗೂ ಸಂಚಾರಿ ತಂಡಗಳನ್ನು ನಿಯೋಜಿಸಲಾಗಿದೆ. ಇದರ ಮೇಲ್ವಿಚಾರಣೆಗಾಗಿ ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸಭೆಯಲ್ಲಿ ಮುಖ್ಯ ಆರೋಗ್ಯಾಧಿಕಾರಿ ಡಾ. ಎಸ್.ಎಸ್. ಮದನಿ, ನಗರ ಪಾಲಿಕೆಗಳ ಆರೋಗ್ಯಾಧಿಕಾರಿಗಳು ಹಾಗೂ ಆರೋಗ್ಯ ವೈದ್ಯಾಧಿಕಾರಿಗಳು ಹಾಜರಿದ್ದರು.

ಪೋಲಿಯೋಮುಕ್ತ ನಗರಕ್ಕಾಗಿ ಕೈಜೋಡಿಸಿ:

ನಾಗರಿಕರು ತಮ್ಮ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಹನಿ ಹಾಕಿಸಿದ್ದರೂ, ಭಾನುವಾರದಂದು 5 ವರ್ಷದೊಳಗಿನ ಮಕ್ಕಳನ್ನು ಸಮೀಪದ ಬೂತ್‌ಗೆ ಕರೆತಂದು ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು. ಪೋಲಿಯೋಮುಕ್ತ ನಗರ ಹಾಗೂ ಪೋಲಿಯೋಮುಕ್ತ ವಿಶ್ವ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಬಿಎ ಮನವಿ ಮಾಡಿದೆ.

ಜಿಬಿಎ ವ್ಯಾಪ್ತಿಯಲ್ಲಿ ಲಸಿಕಾ ಕಾರ್ಯಕ್ರಮದ ವಿವರ:

* ಒಟ್ಟು ಜನಸಂಖ್ಯೆ -1,23,13,207
* ಒಟ್ಟು ಮನೆಗಳು -29,30,605
* 0-5 ವರ್ಷದ ಮಕ್ಕಳು -11,47,872
* ಕೊಳಚೆ ಪ್ರದೇಶಗಳ ಸಂಖ್ಯೆ -1,417
* ವಲಸೆ ಜನಾಂಗದ ಪ್ರದೇಶಗಳು -4,382
* ವಲಸೆ ಜನಸಂಖ್ಯೆ(ಅಂದಾಜು) -1,57,372
* ಬೂತ್‌ಗಳ ಸಂಖ್ಯೆ -3,444
* ಸ್ಥಿರ ತಂಡಗಳ ಸಂಖ್ಯೆ -660
* ಸಂಚಾರಿ ತಂಡಗಳ ಸಂಖ್ಯೆ -435
* ಒಟ್ಟು ಲಸಿಕಾ ಕಾರ್ಯಕರ್ತರು -15,964
* ಒಟ್ಟು ಮೇಲ್ವಿಚಾರಕರು -817
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net