ಬೆಳ್ಳಂದೂರು ಕೆರೆ ಬಫರ್‌ನಲ್ಲಿ ರಸ್ತೆ ನಿರ್ಮಿಸಲು ಸಮೀಕ್ಷೆ

buffer road
buffer road
Published on

ಪ್ರಮುಖ ಮುಖ್ಯಾಂಶಗಳು

  • ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ
  • ವಿಂಡ್ ಟನಲ್ ರಸ್ತೆಗೆ ಪರ್ಯಾಯ ಮಾರ್ಗ ನಿರ್ಮಾಣ
ಬೆಂಗಳೂರು: ನಗರದ ಬೆಳ್ಳಂದೂರು ಕೆರೆ ಬಫರ್ ವಲಯದಲ್ಲಿ ರಸ್ತೆ ನಿರ್ಮಾಣ ಮಾಡಲು ಸಮೀಕ್ಷೆ ನಡೆಸಿ ಶೀಘ್ರವೇ ವರದಿ ಸಲ್ಲಿಸುವಂತೆ ಜಿಬಿಎ ಮುಖ್ಯ ಆಯುಕ್ತ ಎಂ.ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪೂರ್ವ ಹಾಗೂ ದಕ್ಷಿಣ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅವರು ಈ ನಿರ್ದೇಶನ ನೀಡಿದರು. ಬೆಳ್ಳಂದೂರು ಕೆರೆ ಬಫರ್ ವಲಯದಲ್ಲಿ ರಸ್ತೆ ನಿರ್ಮಾಣವಾದಲ್ಲಿ ಆ ಭಾಗದ ಸಂಚಾರ ಸಿಕ್ಕು ನಿವಾರಣೆಯಾಗಲಿದೆ. ಈ ನಿಟ್ಟಿನಲ್ಲಿ ಕೆರೆ ಬಫರ್ ವಲಯದಲ್ಲಿ ಯಾವೆಲ್ಲ ಜಾಗಗಳು ಬರಲಿವೆ ಎಂಬುದನ್ನು ಪರಿಶೀಲಿಸಿ, ರಸ್ತೆ ನಿರ್ಮಾಣ ಸಾಧ್ಯತೆಯ ಕುರಿತು ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸೂಚಿಸಿದರು.

1.4 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಕ್ರಮ:

ವಿಂಡ್ ಟನಲ್ ರಸ್ತೆಗೆ ಪರ್ಯಾಯ ಮಾರ್ಗವಾಗಿ 1.4 ಕಿ.ಮೀ. ಉದ್ದದ ಬಫರ್ ರಸ್ತೆ ನಿರ್ಮಾಣಕ್ಕೆ ಅಗತ್ಯ ಕ್ರಮವನ್ನು ಈಗಾಗಲೇ ಕೈಗೊಳ್ಳಲಾಗಿದೆ. ಇದಕ್ಕಾಗಿ ಗುರುತಿಸಿರುವ ಜಾಗವು ಎಚ್‌ಎಎಲ್‌ಗೆ ಸೇರಿದ್ದು, ರಸ್ತೆ ನಿರ್ಮಾಣಕ್ಕೆ ಸಂಸ್ಥೆಯ ಅಧಿಕಾರಿಗಳು ಸಹಮತ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಈಗಾಗಲೇ ಟೆಂಡರ್ ಆಹ್ವಾನಿಸಿದ್ದು, ರಸ್ತೆ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಿ ಒಪ್ಪಿಗೆ ಪಡೆಯಲಾಗುವುದು. ಆನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.
ಈಜೀಪುರ- ಸರ್ಜಾಪುರ ಬಫರ್ ರಸ್ತೆಯನ್ನು 24 ಮೀ. ಅಗಲದಲ್ಲಿ ನಿರ್ಮಿಸಲಾಗುತ್ತಿದ್ದು, ಈ ಕಾಮಗಾರಿಗೆ ಸುಮಾರು 44 ಕೋಟಿ ರೂ. ವೆಚ್ಚವಾಗಲಿದೆ. ರಸ್ತೆ ನಿರ್ಮಾಣವಾದಲ್ಲಿ ಈ ಎರಡೂ ಪ್ರದೇಶಕ್ಕೆ ನೇರ ರಸ್ತೆ ಸಂಚಾರ ಸಾಧ್ಯವಾಗಲಿದೆ. ಇದರಿಂದ ಈ ಭಾಗದಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂದು ಅವರು ವಿವರಿಸಿದರು.
ಈ ವೇಳೆ ಪೂರ್ವ ಪಾಲಿಕೆ ಆಯುಕ್ತ ಡಿ.ಎಸ್.ರಮೇಶ್, ಅಪರ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್, ಬಿ-ಸ್ಮೈಲ್ ತಾಂತ್ರಿಕ ನಿರ್ದೇಶಕ ಬಿ.ಎಸ್. ಪ್ರಹ್ಲಾದ್, ನಗರ ಯೋಜನಾ ವಿಭಾಗದ ಅಪರ ನಿರ್ದೇಶಕ ಗಿರೀಶ್, ಮುಖ್ಯ ಅಭಿಯಂತರ ಲೋಕೇಶ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net