ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸಲು ಬಿಸಿಯೂಟ

ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸಲು ಬಿಸಿಯೂಟ
ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸಲು ಬಿಸಿಯೂಟ
Published on
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಮಕ್ಕಳಲ್ಲಿ ಪೌಷ್ಠಿಕತೆಯ ಗುಣಮಟ್ಟ ಹೆಚ್ಚಿಸುವಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬಿಸಿಯೂಟ ಯೋಜನೆ ಸಹಕಾರಿಯಾಗಿದೆ. ಮಕ್ಕಳ ಶಿಕ್ಷಣಕ್ಕೂ ಬಿಸಿಯೂಟ ಯೋಜನೆ ಪೂರಕವಾಗಿದೆ ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮಕ್ಕಳಿಗೆ ಪೌಷ್ಟಿಕಾಂಶ ಆಹಾರವನ್ನು ಹೆಚ್ಚು ನೀಡುವತ್ತ ಗಮನ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಾರ್ಯಾನಿರ್ವಹಣಾಧಿಕಾರಿ ಡಾ.ಕೆ.ಎನ್. ಅನುರಾಧಾ ತಿಳಿಸಿದರು.
ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಕ್ಷರ ದಾಸೋಹ (ಮಧ್ಯಾಹ್ನದ ಉಪಹಾರ ಯೋಜನೆ) ಸಿಬ್ಬಂದಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಬಿಸಿ ಯೂಟದಲ್ಲಿ ಯಾವುದೇ ವ್ಯತ್ಯಾಸಗಳು ಆಗದಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಸರಿಯಾದ ಸಮಯಕ್ಕೆ ಮೊಟ್ಟೆ ಮತ್ತು ಬಾಳೆಹಣ್ಣನ್ನು ನೀಡಬೇಕು ಎಂದು ಸೂಚನೆ ನೀಡಿದರು. ಮೊಟ್ಟೆ ಹಾಗೂ ಬಾಳೆಹಣ್ಣು ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವಲ್ಲಿ ಹೆಚ್ಚು ಸಹಕಾರಿಯಾಗಿದೆ, ಗುಣಮಟ್ಟದ ಬಾಳೆಹಣ್ಣುಗಳನ್ನು ತಂದು ನೀಡಬೇಕು ಇದರಲ್ಲಿ ನಿರ್ಲಕ್ಷ್ಯ ಮಾಡಬಾರದು ಎಂದು ತಿಳಿಸಿದರು. ಸರ್ಕಾರವು ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ನೀಡುವ ಮೂಲಕ ಮಕ್ಕಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಮೂಡಲು ಕಾರಣವಾಗುತ್ತದೆ ಎಂದರು. ಸರ್ಕಾರ ಗುಣಮಟ್ಟದ ಆಹಾರವನ್ನು ನೀಡುತ್ತಿದೆ ಈ ಗುಣಮಟ್ಟವನ್ನು ಅಧಿಕಾರಿಗಳು ಕಾಪಾಡಿಕೊಳ್ಳಬೇಕು ಬಿಸಿಯೂಟ ತಯಾರಿಸುವವರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಪ್ರಗತಿ ಬಗ್ಗೆ ಮಾಹಿತಿ ಪಡೆದ ಸಿಇಒ:
ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಬಿಸಿಯೂಟ ಯೋಜನೆಯ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು. ಎಲ್ಲ ಸಿಆರ್‌ಪಿ, ಬಿಆರ್‌ಪಿಗಳು ಪ್ರತಿ ತಿಂಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ಮಾಡಬೇಕು. ಪ್ರತಿ ದಿನ ಮೆನು ಚಾರ್ಟ್ ಆದೇಶದಂತೆಯೇ ಮಕ್ಕಳಿಗೆ ಆಹಾರ ವಿತರಿಸಬೇಕ ಎಂದು ಸಿಇಒ ಅನುರಾಧಾ ಸೂಚಿಸಿದರು. ಕ್ಷೀರಭಾಗ್ಯ, ಪೂರಕ ಪೌಷ್ಟಿಕ ಆಹಾರ ತಪಾಸಣೆ ಮತ್ತು ಮೇಲ್ವಿಚಾರಣೆ ಮಾಡಬೇಕು. ಶಾಲಾ ಹಂತದಲ್ಲಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ತಾಲೂಕು ಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು. ಮುಖ್ಯವಾಗಿ ಶಾಲಾ ಪೌಷ್ಠಿಕ ವನ ಆರ್ಥಿಕ ಪ್ರಗತಿಯನ್ನು ಸಾಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಲವು ವಿಷಯಗಳ ಬಗ್ಗೆ ಚರ್ಚೆ:
ಈ ಸಂದರ್ಭದಲ್ಲಿ ಆಹಾರ ಗುಣಮಟ್ಟ ಮತ್ತು ನೈರ್ಮಲ್ಯ, ಪೌಷ್ಟಿಕ ಆಹಾರ ವಿತರಣೆ, ಆಡಳಿತಾತ್ಮಕವಾಗಿ ಅಡುಗೆ ಸಿಬ್ಬಂದಿಗಳ ಆಧಾರ್ ವ್ಯಾಲಿಡೇಷನ್, ಗೌರವಧನ ಪಾವತಿ, ಉಪಕರಣ ಮತ್ತು ಮೂಲಸೌಕರ್ಯ ಇನ್ನಿತರೆ ವಿಷಯಗಳ ಕುರಿತು ಸಿಇಒ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಬಿಸಿಯೂಟ ತಯಾರಿಸುವ ಸಿಬ್ಬಂದಿಗಳಲ್ಲಿ ಏನಾದರೂ ಸಮಸ್ಯೆಗಳಿದ್ದ ನನ್ನ ಗಮನಕ್ಕೆ ತನ್ನಿ ಎಂದು ಸಿಇಒ ಡಾ.ಕೆ.ಎನ್.ಅನುರಾಧಾ ಹೇಳಿದರು. ಸರ್ಕಾರ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಹಲವು ಯೋಜನೆಗಳನ್ನು ರೂಪಿಸಿದೆ ಅದರಲ್ಲಿ ಬಿಸಿಯೂಟ ಯೋಜನೆಯು ಮಹತ್ವದ್ದಾಗಿದೆ ಈ ಯೋಜನೆ ಅನುಷ್ಟಾನದಲ್ಲಿ ಯಾವುದೇ ಲೋಪವಿದ್ದರೂ ತಕ್ಷಣ ಗಮನಕ್ಕೆ ತಂದು ಸರಿಪಡಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ಹೇಳಿದರು.ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಆದ್ಯತೆ ನೀಡಬೇಕು, ಬಿಸಿಯೂಟದಲ್ಲಿ ಯಾವುದೇ ವ್ಯತ್ಯಾಸಗಳು ಆಗಬಾರದು, ಇದರಲ್ಲಿ ಅಕ್ಷರ ದಾಸೋಹ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net