ಮುಂಬರುವ 2028 ರ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ಬಹುಮತ ನೀಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರಕ್ಕೆ ಅವಕಾಶ ನೀಡಲಿದ್ದಾರೆ ಎಂಬ ಭರವಸೆ ಇದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಮೂರು ವರ್ಷ ಪೂರೈಸಿದೆ ಇದು ಯಾವುದೇ ಅಡೆತಡೆಯಿಲ್ಲದೆ ಮುಂದುವರೆಯಲಿದೆ ಎಂದು ಹೇಳಿದರು. ರಾಜ್ಯ ಸರ್ಕಾರದ ಈ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಕಂಡು ಇನ್ನಿತರ ರಾಜ್ಯಗಳು ಇದನ್ನು ಮಾದರಿಯಾಗಿ ತೆಗೆದುಕೊಳ್ಳುತ್ತಿವೆ ಎಂದು ಹರ್ಷ ವ್ಯಕ್ತಪಡಿಸಿದರು. ಗ್ಯಾರಂಟಿ ಯೋಜನೆಯಡಿ ಅರ್ಹ ಲಾನುಭವಿಗಳಿಗೆ ಸಕಾಲದಲ್ಲಿ ಯೋಜನೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ತಾಕೀತು ಮಾಡಿದರು. ಶಿರವಾರ ಗ್ರಾಮದಲ್ಲಿನ ಇನ್ನುಳಿದ ರಸ್ತೆ, ಚರಂಡಿ, ನಿವೇಶನ ಹಕ್ಕು ಪತ್ರ ಸಮಸ್ಯೆ, ಕನಕ ಭವನ ನಿರ್ಮಾಣ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹರಿಸಲಾಗುವುದು ಎಂದರು.