ಬಿಸಿಯೂಟಕ್ಕಿಲ್ಲ ಗ್ಯಾಸ್ ಟ್ರಬಲ್

gas problem
gas problem
Published on
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಕೊಲ್ಲಿ ಯುದ್ಧದ ಪರಿಣಾಮವಾಗಿ ಎಲ್ಲೆಡೆ ಗ್ಯಾಸ್ ಸಿಲಿಂಡರ್ ಕೊರತೆ ಎದುರಾಗಿದ್ದರೂ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟಕ್ಕೆ ಯಾವುದೇ ಅಡೆತಡೆ ಇಲ್ಲ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಭರವಸೆ ನೀಡಿದೆ.
ಅಗತ್ಯಸೇವೆ ಸಾಲಿನಲ್ಲಿ ಪ್ರತಿ ಸರ್ಕಾರಿ ಶಾಲೆಗೂ ಗ್ಯಾಸ್ ಸಿಲಿಂಡರ್‌ಗಳನ್ನು ಆದ್ಯತೆ ಮೇಲೆ ಪೂರೈಸುವಂತೆ ಶಿಕ್ಷಣ ಇಲಾಖೆ ಸೂಚನೆ ಹೊರಡಿಸಿದ್ದು, ಇದರ ಹಿನ್ನೆಲೆಯಲ್ಲಿ ಶಾಲೆಗಳಿಗೆ ಸಕಾಲದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಸಲಾಗುತ್ತಿದೆ. ತುರ್ತು ಸಂದರ್ಭ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿಯಾಗಿಯೂ ಸಿಲಿಂಡರ್ ದಾಸ್ತಾನು ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಎಂದಿನಂತೆ ಬಿಸಿಯೂಟ ಯೋಜನೆ ನಡೆಯುತ್ತಿದ್ದು ವಿದ್ಯಾರ್ಥಿಗಳು ನಿರಾತಂಕವಾಗಿದ್ದಾರೆ.
ಜಿಲ್ಲೆಯಲ್ಲಿ ಎಲ್ಲಿಯೂ ಟ್ರಬಲ್ ಇಲ್ಲ:
ಕೊಲ್ಲಿ ಯುದ್ದ ಆರಂಭವಾದ ಬಳಿಕ ಕಳೆದೆರಡು ದಿನಗಳಿಂದ ದಿಢೀರನೇ ಗ್ಯಾಸ್ ಸಿಲಿಂಡರ್ ಕೊರತೆ ಉಲ್ಭಣಿಸಿದೆ. ಇದರಿಂದ ಶಾಲಾ ಮಕ್ಕಳ ಬಿಸಿಯೂಟ ತಯಾರಿಕೆಯಲ್ಲಿ ವ್ಯತ್ಯಯವಾಗಲಿದೆ ಎಂಬ ಆತಂಕ ಪಾಲಕರಲ್ಲಿ ಕಾಣಿಸಿಕೊಂಡಿತ್ತು. ಆದರೆ ಆತಂಕ ದೂರ ಮಾಡಿರುವ ಇಲಾಖೆ ಬಿಸಿಯೂಟ ಯೋಜನೆಗೆ ಯಾವುದೇ ಅಡೆತಡೆ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಹಾಸ್ಟೆಲ್‌ಗಳಲ್ಲೂ ಸಮಸ್ಯೆ ಇಲ್ಲ:
ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯಡಿ ಬರುವ ವಸತಿ ಶಾಲೆಗಳಲ್ಲೂ ಗ್ಯಾಸ್ ಸಿಲಿಂಡರ್‌ಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ.
ಡಿಸಿ ಮೀಟಿಂಗ್:
ಗ್ಯಾಸ್ ಸಮಸ್ಯೆ ಉಲ್ಭಣಗೊಂಡಿರುವ ಹಿನ್ನೆಲೆಯಲ್ಲಿ ತುರ್ತು ಸಭೆ ನಡೆಸಿರುವ ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧಾ ಆಹಾರ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡಿಸಿದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳಲ್ಲಿ ಹಾಗೂ ವಸತಿ ನಿಲಯಗಳಲ್ಲಿ ಮಕ್ಕಳ ಊಟಕ್ಕೆ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸುವಂತೆ ತಾಕೀತು ಮಾಡಿದ್ದಾರೆ. ಅಲ್ಲದೇ ಖುದ್ದು ಜಿಲ್ಲಾಧಿಕಾರಿ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಗ್ಯಾಸ್ ಸಿಲಿಂಡರ್ ಸಮಸ್ಯೆ ಉಲ್ಭಣಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಎಲ್ಲ ವಸತಿ ಶಾಲೆಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಗ್ಯಾಸ್ ಏಜೆನ್ಸಿ ಮಾಲೀಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನೀಡಲಾಗಿದೆ ಆದ್ದರಿಂದ ಜಿಲ್ಲೆಯಲ್ಲಿ ಸರ್ಕಾರಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಸಮಸ್ಯೆ ಎದುರಾಗುವುದಿಲ್ಲ.
ಡಾ.ಕೆ.ಎನ್.ಅನುರಾಧಾ, ಜಿಲ್ಲಾಧಿಕಾರಿ
ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಯೋಜನೆಗೆ ಯಾವುದೇ ಅಡೆತಡೆಯಾಗಬಾರದು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅಲ್ಲದೆ ಅಗತ್ಯಸೇವೆಯಿಡಿ ಗ್ಯಾಸ್ ಸಿಲಿಂಡರ್ ಪೂರೈಸುವಂತೆ ಶಿಕ್ಷಣ ಇಲಾಖೆ ಸೂಚನೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಎಂದಿನಂತೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಯೋಜನೆ ನಿರಾಂತಕವಾಗಿ ನಡೆಯುತ್ತಿದೆ.
ಹನುಮನಾಯಕ್ ಇಒ ಬಿಸಿಯೂಟ ಯೋಜನೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net