ನಮ್ಮದು ರೈತಪರ ಸರ್ಕಾರ

*ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭರವಸೆ
*ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭರವಸೆ
Published on
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ನಮ್ಮದು ರೈತ ಪರ ಸರ್ಕಾರ, ಯಾವುದೇ ಸಂದರ್ಭ ಇದ್ದರೂ ನಾವು ರೈತರಿಗೆ ಮೊದಲ ಆದ್ಯತೆ ನೀಡುತ್ತೇವೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭರವಸೆ ನೀಡಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 10 ಕೋಟಿ ರೂ.ವೆಚ್ಚದಲ್ಲಿ ವಿವಿಧ ರಸ್ತೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಬಹಳ ದಿನಗಳಿಂದ ಈ ಭಾಗದ ರೈತರು ತಮ್ಮ ಸಮಸ್ಯೆಗಳನ್ನು ಹೇಳುತ್ತಿದ್ದರು. ಹಾಗೇ ಜಮೀನುಗಳಿಗೆ ಹೋಗಿ ಕೃಷಿ ಮಾಡಲು ಸೂಕ್ತ ರಸ್ತೆಯನ್ನು ಮಾಡಿಕೊಡಿ ಎಂದು ಹಲವರು ಅಹವಾಲುಗಳನ್ನು ನೀಡಿದ್ದರು. ಅದಕ್ಕೆ ಸೂಕ್ತ ಸಮಯ ಈ ದಿನವಾಗಿದೆ. ಏಕೆಂದರೆ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವ ನಡೆದಿದೆ. ಈ ಶುಭದಿನದಂದು ರಸ್ತೆ ಹಾಗೂ ವಿವಿಧ ಕಾಮಗಾರಿಗೆ ಚಾಲನೆ ನೀಡಿರುವುದು ಖುಷಿಯ ವಿಚಾರವಾಗಿದೆ ಎಂದರು.
ರೈತರಿಗೆ ಸಹಕಾರ:
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಏಕನಿರ್ಧಾರದಿಂದ ಕೈಬಿಡಲಾಗಿದೆ. ಇದು ಸರ್ಕಾರಕ್ಕೆ ರೈತರ ಪರವಾಗಿ ಇರುವ ಬದ್ಧತೆಯಾಗಿದೆ. ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಿದೆ ಆದರೆ ರೈತರ ವಿರೋಧಿಯಾಗಿ ಯಾವುದೇ ಕೆಲಸ ಮಾಡುವುದಿಲ್ಲ ಈ ಬಗ್ಗೆ ರೈತರು ಚಿಂತಿಸುವ ಅವಶ್ಯಕತೆ ಇಲ್ಲ ಎಂದು ಸಚಿವರು ತಿಳಿಸಿದರು.
ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ:
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ ರಾಜಣ್ಣ ಮಾತನಾಡಿ, ಉಸ್ತುವಾರಿ ಸಚಿವರು ದೇವನಹಳ್ಳಿ ಕ್ಷೇತ್ರ ಸೇರಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅವಿರತ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. ಈಗಾಗಲೇ ತಾಲೂಕಿನಲ್ಲಿ ಹಲವಾರು ಕೋಟಿ ರೂ.ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಣಲಿದ್ದೇವೆ ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net