ಬಿಎಲ್‌ಒ ಕೆಲಸದಿಂದ ಅಂಗನವಾಡಿ ಸೇವೆಗೆ ಅಡ್ಡಿ

protest
protest
Published on
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಅಂಗನವಾಡಿ ನೌಕರರನ್ನು ಬಿಎಲ್‌ಒ ಕೆಲಸಕ್ಕೆ ನಿಯೋಜಿಸಿರುವುದರಿಂದ ಅಂಗನವಾಡಿ ಸೇವೆಗೆ ತೊಂದರೆಯಾಗುತ್ತಿದೆ, ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ನಳಿನಾಕ್ಷಿ ಒತ್ತಾಯಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸ್ಕೀಮ್ ನೌಕರರ ಕರಾಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಒತ್ತಾಯಿಸಿದ ಅವರು ಅಂಗನವಾಡಿ ನೌಕರರಲ್ಲಿ ಹಲವರಿಗೆ ಆರೋಗ್ಯ ಸಮಸ್ಯೆಗಳಿದ್ದು, ಕೆಲವರಿಗೆ ಗರ್ಭಕೋಶ ಶಸ್ತ್ರಚಿಕಿತ್ಸೆ ನಡೆದಿದೆ. ಕೆಲವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಇನ್ನೂ ಕೆಲವರಿಗೆ ಕಾಲು ನೋವು ಹಾಗೂ ಮೊಬೈಲ್‌ನಲ್ಲಿ ಕೆಲಸ ಮಾಡಲು ಕಣ್ಣಿನ ಸಮಸ್ಯೆಗಳಿವೆ. ಇಂತಹ ಪರಿಸ್ಥಿತಿಯಲ್ಲಿ ಬಿಎಲ್‌ಒ ಜವಾಬ್ದಾರಿ ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಹೇಳಿದರು.ಅಂಗನವಾಡಿಗಳು ಈಗಾಗಲೇ ಆರಂಭವಾಗಿದ್ದು, ಮಕ್ಕಳು ಕೇಂದ್ರಗಳಿಗೆ ಬರುತ್ತಿದ್ದಾರೆ. ಈ ವೇಳೆ ನೌಕರರನ್ನು ಬಿಎಲ್‌ಒ ಕೆಲಸಕ್ಕೆ ನಿಯೋಜಿಸಿದರೆ ಮಕ್ಕಳ ಪಾಲನೆ ಮತ್ತು ಶಿಕ್ಷಣದ ಮೇಲೆ ಪರಿಣಾಮ ಬೀಳಲಿದೆ. ಮಕ್ಕಳಿಗೆ ಯಾವುದೇ ಸಮಸ್ಯೆಯಾದರೆ ಅದರ ಹೊಣೆ ಯಾರು ಎಂದು ಪ್ರಶ್ನಿಸಿದರು.
ಅಂಗನವಾಡಿಗಳಲ್ಲೇ ಎಲ್‌ಕೆಜಿಯುಕೆಜಿ ಆರಂಭಕ್ಕೆ ಒತ್ತಾಯ:
ರಾಷ್ಟ್ರೀಯ ಶಿಕ್ಷಣ ನೀತಿ2020 ಜಾರಿಯಿಂದ 3 ರಿಂದ 6 ವರ್ಷದ ಮಕ್ಕಳನ್ನು ಅಂಗನವಾಡಿಗಳಿಂದ ದೂರವಿಟ್ಟು ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಇದರಿಂದ ಅಂಗನವಾಡಿಗಳ ಫಲಾನುಭವಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ನಳಿನಾಕ್ಷಿ ತಿಳಿಸಿದರು. ರಾಜ್ಯದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸುವುದಾಗಿ ಸರ್ಕಾರ ಘೋಷಿಸಿದ್ದರೂ, ಅದಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿಲ್ಲ ಜತೆಗೆ ಫಲಾನುಭವಿಗಳಿಗೆ ಸ್ಥಳೀಯ ತಾಜಾ ಆಹಾರದ ಬದಲಿಗೆ ಸಂಸ್ಕರಿಸಿದ ಪ್ಯಾಕೆಟ್ ಆಹಾರ, ನಗದು ವರ್ಗಾವಣೆ ಹಾಗೂ ಕೇಂದ್ರಿಕೃತ ಅಡಿಗೆ ವ್ಯವಸ್ಥೆಗಳ ಮೂಲಕ ಐಸಿಡಿಎಸ್ ಯೋಜನೆಯನ್ನು ಖಾಸಗೀಕರಣ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಮೂಲ ಸೌಲಭ್ಯಗಳ ಬೇಡಿಕೆ:
ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ 41 ಸಾವಿರ ರೂ. ಹಾಗೂ ಸಹಾಯಕಿಯರಿಗೆ 35 ಸಾವಿರ ರೂ. ಕನಿಷ್ಠ ವೇತನ ನೀಡಬೇಕು ಎಂದು ಸಂಘ ಒತ್ತಾಯಿಸಿತು. ಜತೆಗೆ, ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಶುದ್ಧ ಕುಡಿಯುವ ನೀರು, ಗ್ಯಾಸ್ ಸಂಪರ್ಕ, ಅಡುಗೆ ಸಲಕರಣೆ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳಿಗೆ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಬಾಡಿಗೆ ನೀಡಬೇಕೆಂದು ಆಗ್ರಹಿಸಲಾಯಿತು. 500 ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net