ಹೆಸರಿಲ್ಲ ಎಂದು ಭಯ ಬೇಡ

SIR pressmeet
SIR pressmeet
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ ಎಂದು ಮತದಾರರು ಭಯ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ ಕೆ.ಎನ್.ಅನುರಾಧಾ ತಿಳಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್) ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಾಹಿತಿ ತಿಳಿಸಿದರು. ಮತದಾರರ ಹೆಸರು ಎಸ್‌ಐಆರ್ ಪಟ್ಟಿಯಲ್ಲಿ ಇಲ್ಲ ಎಂದು ಆತಂಕ ಪಡುವ ಅಗತ್ಯವಿಲ್ಲ, ಆ.8 ವರೆಗೆ ಎಸ್‌ಐಆರ್ ಪ್ರಕ್ರಿಯೆ ನಡೆಯಲಿದೆ. ಆ.17 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಆ.17 ರಿಂದ ಸೆ. 16 ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಸೂಕ್ತ ದಾಖಲೆಗಳನ್ನು ನೀಡಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು. ಅಂತಿಮ ಮತದಾರರ ಪಟ್ಟಿಯನ್ನು ಅ.19 ರಂದು ಪ್ರಕಟಿಸಲಾಗುವುದು ಎಂದರು.
9,12,913 ಗಣತಿ ನಮೂನೆ ವಿತರಣೆ:
ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, 9,12,913 ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಅ.4 ರವರೆಗೆ 7,94,061 ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ. ಶೇ. 86.98 ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಗೈರು, ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ 1,18,608 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 66,587 ಶಾಶ್ವತ ವಲಸೆ ಹಾಗೂ 25,039 ಮರಣ ಹೊಂದಿದ ಪ್ರಕರಣಗಳು, 12,038 ದ್ವಿಪ್ರತಿಗಳು, 14,139 ಗೈರು ಹಾಗೂ ಇತರೆ 805 ಸೇರಿವೆ.181-ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ 1,91,648 ನಮೂನೆಗಳು ಗಣಕೀಕೃತಗೊಂಡಿವೆ. 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 1,91,536 ನಮೂನೆಗಳು ಗಣಕೀಕೃತಗೊಂಡಿವೆ. 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 2,17,119 ನಮೂನೆಗಳು ಗಣಕೀಕೃತಗೊಂಡಿವೆ. 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 1,93,758 ನಮೂನೆಗಳು ಗಣಕೀಕೃತಗೊಂಡಿವೆ ಎಂದು ಮಾಹಿತಿ ನೀಡಿದರು. ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮತದಾರರ ಮನೆ-ಮನೆಗಳಿಗೆ ಭೇಟಿ ನೀಡಿದ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು, ಮತದಾರರು ತಮ್ಮ ಅವಶ್ಯಕ ಮಾಹಿತಿಗಳನ್ನು ಎಣಿಕೆ, ಗಣತಿ ನಮೂನೆಗಳನ್ನು ಬಿಎಸ್‌ಒಗಳಿಗೆ ನೀಡಿ ಸಹಕರಿಸಬೇಕೆಂದು ತಿಳಿಸಿದರು. ಜಿಲ್ಲೆಯಲ್ಲಿ ಆರಂಭವಾದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ವಿವಿಧ ಇಲಾಖೆಯ ಸಿಬ್ಬಂದಿ, ಬಿಇಒಗಳು ಸಾಕಷ್ಟು ಶ್ರಮವಹಿಸಿ ಕರ್ತವ್ಯ ನಿರ್ವಹಿಸಿದ್ದಾರೆ. ಜಿಲ್ಲೆಯ ನಾಲ್ಕೂ ತಾಲೂಕುಗಳಿಂದ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net