

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಕಾಡತಿಪ್ಪೂರು ಗ್ರಾಮ ಸಮಸ್ಯೆ ಮುಕ್ತ ಹಳ್ಳಿಯಾಗಬೇಕು ಎಂಬ ನಿಟ್ಟಿನಲ್ಲಿ ಇಲ್ಲಿನ ಜನರಿಗೆ ಕಾನೂನಿನ ಅರಿವಿನ ಜತೆಗೆ ಸರ್ಕಾರದ ಎಲ್ಲ ಸೌಲಭ್ಯಗಳನ್ನು ದೊರೆಕಿಸಿಕೊಡುವ ನಿಟ್ಟಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ದಾಸರಿ ಕ್ರಾಂತಿ ಕಿರಣ್ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ಕಾಡತಿಪ್ಪೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ದೊಡ್ಡಬಳ್ಳಾಪುರ ವಕೀಲರ ಸಂಘ, ತಾಲೂಕು ಕಚೇರಿ ಹಾಗೂ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು. ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರಿಗೆ ಸರ್ಕಾರದಿಂದ ಬರುವ ಸೌಲಭ್ಯಗಳು ತಲುಪುತ್ತಿದೆಯೇ ಇಲ್ಲವೇ? ಎಂಬುದನ್ನು ಪರಿಶೀಲಿಸಿ ಯಾವುದು ದೊರಕಿಲ್ಲ ಎಂಬುದನ್ನು ಗುರುತಿಸಿ ಅವರಿಗೆ ದೊರಕಿಸಿಕೊಡುವ ಜತೆಗೆ ಕಾನೂನು ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. ದೊಡ್ಡಬಳ್ಳಾಪುರ ತಾಲೂಕಿನಲ್ಲಿರುವ ಹಿಂದುಳಿದ ಹಳ್ಳಿಗಳಲ್ಲಿ ಒಂದಾಗಿರುವ ಈ ಹಳ್ಳಿಯನ್ನು ಅಭಿವೃದ್ಧಿ ಪಥದತ್ತ ಸಾಗುವಂತೆ ಮಾಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಕಾಡತಿಪ್ಪೂರು ದತ್ತು:
ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಕಾಡ ತಿಪ್ಪೂರು ಗ್ರಾಮವನ್ನು ದತ್ತು ಪಡೆದುಕೊಂಡಿದ್ದು ಈ ಗ್ರಾಮದಲ್ಲಿರುವ ಮನೆ ಮನೆ ಭೇಟಿ ನೀಡಿ ಅವರ ಸಮಸ್ಯೆಯನ್ನು ಕೇಳಿ ಅವರಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀಶೈಲ ಭೀಮಸೇನ ಬಾಗಡಿ ತಿಳಿಸಿದರು. ಅನೇಕ ಸಂದರ್ಭಗಳಲ್ಲಿ ಕಾನೂನಿನ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಜನರು ತಮ್ಮ ಹಕ್ಕುಗಳಿಂದ ವಂಚಿತರಾಗುತ್ತಾರೆ. ಕೆಲವರು ಕಾನೂನಿನ ಅರಿವಿನ ಕೊರತೆಯಿಂದ ಅನಗತ್ಯ ಸಮಸ್ಯೆಗಳಿಗೆ ಸಿಲುಕುತ್ತಾರೆ. ಇಂತಹ ಪರಿಸ್ಥಿತಿಗಳನ್ನು ತಪ್ಪಿಸಲು ಶಾಲಾ-ಕಾಲೇಜು ಹಂತದಿಂದಲೇ ಕಾನೂನು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಅಗತ್ಯವಾಗಿದೆ. ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಅರ್ಹ ವ್ಯಕ್ತಿಗಳಿಗೆ ಉಚಿತ ಕಾನೂನು ನೆರವು ದೊರೆಯುವ ವ್ಯವಸ್ಥೆಯೂ ಇದೆ. ಆರ್ಥಿಕವಾಗಿ ಹಿಂದುಳಿದವರು ಹಾಗೂ ಕಾನೂನು ನೆರವಿನ ಅಗತ್ಯವಿರುವವರು ಈ ಸೌಲಭ್ಯಗಳ ಬಗ್ಗೆ ತಿಳಿದುಕೊಂಡು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀಶೈಲ ಭೀಮಸೇನ ಬಾಗಡಿ ತಿಳಿಸಿದರು.
ಕಾನೂನಿನ ಪಾತ್ರ ಮಹತ್ವ:
ಪ್ರತಿಯೊಬ್ಬ ವ್ಯಕ್ತಿಯ ದೈನಂದಿನ ಬದುಕಿನಲ್ಲಿಯೂ ಕಾನೂನಿನ ಪಾತ್ರ ಮಹತ್ವದ್ದಾಗಿದೆ ಕಾನೂನಿನ ಅರಿವು ಕೇವಲ ಪುಸ್ತಕದ ಜ್ಞಾನಕ್ಕೆ ಸೀಮಿತವಾಗಬಾರದು. ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಕಾನೂನನ್ನು ಗೌರವಿಸುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ನ್ಯಾಯಯುತ, ಸಮಾನತೆಯ ಸಮಾಜ ನಿಮಾರ್ಣವಾಗಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾನೂನಿನ ಅರಿವನ್ನು ಕುಟುಂಬದ ಸದಸ್ಯರು ಹಾಗೂ ಸುತ್ತಮುತ್ತಲಿನ ಜನರಿಗೂ ತಲುಪಿಸುವ ಕಾರ್ಯ ಮಾಡಬೇಕು ಎಂದು ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟೇಶ್ ರೆಡ್ಡಿ ತಿಳಿಸಿದರು. ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಅರಿವು ಅತ್ಯಂತ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಸಂವಿಧಾನ, ಮೂಲಭೂತ ಹಕ್ಕು, ಕರ್ತವ್ಯಗಳು ಹಾಗೂ ಕಾನೂನಿನ ಮಹತ್ವ ತಿಳಿದುಕೊಳ್ಳಬೇಕು. ಕಾನೂನಿನ ಅರಿವು ಹೊಂದಿರುವ ವ್ಯಕ್ತಿ ಹಕ್ಕುಗಳನ್ನು ರಕ್ಷಿಸಿಕೊಳ್ಳುವುದರ ಜತೆಗೆ ಸಮಾಜದಲ್ಲಿ ಇತರರ ಹಕ್ಕುಗಳಿಗೂ ಗೌರವ ನೀಡಲು ಸಾಧ್ಯವಾಗುತ್ತದೆ ಎಂದರು.
ದೊಡ್ಡಬಳ್ಳಾಪುರ ತಾಲೂಕಿನ ಕಾಡತಿಪ್ಪೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಡಿ. ಕ್ರಾಂತಿ ಕಿರಣ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನ ಬಾಗಡಿ, ಜಾಲಪ್ಪ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ. ಬಲವಂತ್ ಕಲಾಸ್ಟರ್, ತಹಶೀಲ್ದಾರ್ ಮಲ್ಲಪ್ಪ ಮತ್ತಿತರರು ಇದ್ದರು.