

ವಿಜಯವಾಣಿ ಸುದ್ದಿಜಾಲ ಉಡುಪಿ
ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಅಸಮಾನತೆ ಹೋಗಲಾಡಿಸುವ ಉದ್ದೇಶದಿಂದಲೇ ಕೇಂದ್ರ ಸರ್ಕಾರ ಬೇಟಿ ಬಚಾವೋ-ಬೇಟಿ ಪಢಾವೋ ಎಂಬ ಯೋಜನೆ ಜಾರಿಗೆ ತಂದಿದೆ. ಹೆಣ್ಣು ಭ್ರೂಣ ಹತ್ಯೆ ತಡೆಯುವುದು ಹಾಗೂ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಿ ಅವರೂ ಗೌರವಯುತ ಜೀವನ ನಡೆಸಬೇಕೆನ್ನುವುದೇ ಇದರ ಮುಖ್ಯ ಉದ್ದೇಶವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.
ಉಡುಪಿಯ ಜಿಪಂನ ಡಾ. ವಿ.ಎಸ್. ಆಚಾರ್ಯ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಫೆ.15ರಂದು ಆಯೋಜಿಸಿದ್ದ 'ಬೇಟಿ ಬಚಾವೋ-ಬೇಟಿ ಪಢಾವೋ ಯೋಜನೆಗೆ 10 ವರ್ಷ ಪೂರ್ಣಗೊಂಡಿದ್ದರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಜೀತ ಪದ್ಧತಿ ರದ್ದತಿಯ ಪ್ರತಿಜ್ಞಾ ವಿಧಿ ಬೋಧಿಸಿದ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾತನಾಡಿ, ಲಿಂಗಾನುಪಾತದಲ್ಲಿ ಈಗಲೂ ಹೆಣ್ಣು ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ, ಉಡುಪಿ ಜಿಲ್ಲೆಯಲ್ಲಿ ಸದ್ಯ ಆ ಪರಿಸ್ಥಿತಿ ಇಲ್ಲದಿರುವುದು ಆಶಾದಾಯಕವಾಗಿದೆ. ಹೆಣ್ಣು ಹುಟ್ಟುವುದೇ ಬೇಡ, ಅವರು ಹೊರೆಯಾಗುತ್ತಾರೆ ಎಂದು ಭಾವಿಸಬಾರದು. ಗಂಡು ಮಕ್ಕಳಿಗೆ ಸರಿಸಮಾನವಾಗಿ ಅವರನ್ನೂ ಬೆಳೆಸಬೇಕು. ಹೆಣ್ಣೆಂಬ ಅನುಕಂಪ ತೋರದೆ ಎಲ್ಲ ಕ್ಷೇತ್ರಗಳಲ್ಲೂ ಅವಕಾಶ ಕೊಟ್ಟು ಸಮಾನತೆ ಕಲ್ಪಿಸಬೇಕು. ಗ್ರಾಮೀಣ ಹಾಗೂ ತಳ ಸಮುದಾಯದ ಹೆಣ್ಣು ಮಕ್ಕಳು ಮುನ್ನೆಲೆಗೆ ಬರಬೇಕು ಎಂದರು.
ವೈಕುಂಠ ಬಾಳಿಗಾ ಕಾನೂನು ವಿದ್ಯಾಲಯದ ನಿರ್ದೇಶಕಿ ನಿರ್ಮಲಾಕುಮಾರಿ, ವಕೀಲ ಪ್ರದೀಪ್ ಪಿ.ಜೆ., ಉಪ ಕಾನೂನು ನೆರವು ಅಭಿರಕ್ಷಕ ಶ್ರೀನಿವಾಸ್ ಉಪಾಧ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಅಗತ್ಯ ಮಾಹಿತಿ ನೀಡಿದರು.
ಉಡುಪಿ ಪೊಲೀಸ್ ನಿರೀಕ್ಷಕ ಡಾ. ಡಿ.ಟಿ. ಪ್ರಭು, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮ್ಮದ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧಾ ಹಾದಿಮನೆ ವಂದಿಸಿದರು. ದೀಪಾ ಕಾರ್ಯಕ್ರಮ ನಿರೂಪಿಸಿದರು.