

ಮಡಿಕೇರಿ: ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಎಲ್ಲಾ ಹಂತದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಕೋಟೆ ಆವರಣದಿಂದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದವರೆಗೆ ಮೆರವಣಿಗೆ ಏರ್ಪಡಿಸಬೇಕು. ಮೆರವಣಿಗೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ನಗರಸಭೆ ವತಿಯಿಂದ ಸ್ತಬ್ಧಚಿತ್ರವನ್ನು ಮಾಹಿತಿ ಶಿಕ್ಷಣ ಚಟುವಟಿಕೆಯಡಿ ನಿರ್ಮಿಸಬೇಕು. ವಿದ್ಯಾರ್ಥಿಗಳಿಗೆ ಬೆಳಗ್ಗಿನ ಉಪಾಹಾರ ವ್ಯವಸ್ಥೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಅಗತ್ಯ ತಯಾರಿ ಮಾಡಿಕೊಳ್ಳಬೇಕು. ಎಂಜಿನಿಯರಿಂಗ್ ಇಲಾಖೆಗಳು ವೇದಿಕೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಮಾತನಾಡಿ, ಕಳೆದ ಎರಡು ವರ್ಷದಿಂದ ಕೋವಿಡ್-೧೯ ಹಿನ್ನೆಲೆ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗಿತ್ತು. ಈ ಬಾರಿ ವ್ಯವಸ್ಥಿತವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಎಲ್ಲಾ ಹಂತದ ಇಲಾಖಾ ಅಧಿಕಾರಿಗಳು ತಮಗೆ ವಹಿಸಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೇಶವ ಕಾಮತ್ ಮಾತನಾಡಿ, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಧ್ವಜ ಹಾರಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ, ಸರ್ಕಾರದ ನಿರ್ದೇಶನದಂತೆ ಕ್ರಮವಹಿಸಲಾಗುವುದು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್‌ರವರು, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಡಿವೈಎಸ್‌ಪಿ ಗಜೇಂದ್ರ ಪ್ರಸಾದ್ ಧ್ವಜಾರೋಹಣ ಮತ್ತಿತರ ಸಂಬಂಧ ಮಾಹಿತಿ ನೀಡಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಜಿ.ಪಂ.ಮುಖ್ಯ ಯೋಜನಾಧಿಕಾರಿ ರಾಜಗೋಪಾಲ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬಾನಾ ಎಂ.ಷೇಕ್, ನಗರಾಭಿವೃದ್ಧಿ ಶಾಖೆಯ ಯೋಜನಾ ನಿರ್ದೇಶಕಿ ಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೊಹಿಸಿನ್ ಪಾಷಾ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಮಂಜುನಾಥ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಪಿಎಂಜಿಎಸ್‌ವೈ ಎಂಜಿನಿಯರ್ ಪ್ರಭು, ಸೆಸ್ಕ್ ಎಇಇ ವಿನಯ ಕುಮಾರ್, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯ, ಸ್ಕೌಟ್ಸ್ ಮತ್ತು ಗೈಡ್ಸ್‌ನ ಸಂಯೋಜನಾ ಅಧಿಕಾರಿ ದಮಯಂತಿ ಇತರರಿದ್ದರು.