

ಮಂಡ್ಯ: ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಜಾತಿ ಹೆಸರಿನಲ್ಲಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿರುವ ಶಾಸಕ ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಭೀಮ್ ಆರ್ಮಿ ಸೌತ್ ಇಂಡಿಯಾ ಕರ್ನಾಟಕ ಸಂಸ್ಥಾಪಕ ಎಸ್.ಪಿ.ಶಿವಕುಮಾರ್ ಒತ್ತಾಯಿಸಿದರು.
ಇತ್ತೀಚೆಗೆ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಸಮಾಜದ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಕಳೆದ ಎರಡು ತಿಂಗಳ ಹಿಂದೆ ಕನಕಪುರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಒಬ್ಬರ ಮೇಲೆ ದೌರ್ಜನ್ಯ ನಡೆದು ಒಂದು ಕೈಯನ್ನು ಕತ್ತರಿಸಲಾಗಿದೆ. ಇಂತಹ ಹಲವು ಪ್ರಕರಣಗಳು ನಡೆದಿವೆ ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಮುನಿರತ್ನ ಒಬ್ಬ ಮಾಜಿ ರೌಡಿ ಶೀಟರ್ ಆಗಿದ್ದು, ಈ ವ್ಯಕ್ತಿಯಿಂದ ನ್ಯಾಯ ನಿರೀಕ್ಷೆ ಮತ್ತು ಜನರಿಗೆ ರಕ್ಷಣೆ ಇಲ್ಲದಾಗಿದೆ. ಇಂತಹ ಘಟನೆಗಳು ಮತ್ತೆ ನಡೆಯದಂತೆ ತಡೆಯಲು ಮುನಿರತ್ನ ವಿರುದ್ಧ ಕಾನೂನು ಕ್ರಮ ಜರುಗಿಸಿ ಜನರಿಗೆ ಸ್ಪಷ್ಟ ಸಂದೇಶ ನೀಡಬೇಕು ಎಂದು ಮನವಿ ಮಾಡಿದರು.
ಸಿ.ಅನ್ನದಾನಿ, ಅನಿಲ್‌ಕುಮಾರ್ ಇದ್ದರು.