

ಗುಂಡ್ಲುಪೇಟೆ: ಗ್ರಾಮೀಣ ಪ್ರದೇಶಗಳ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ಗುಂಡ್ಲುಪೇಟೆ ತಾಲೂಕಿನ ಹೊಸಪುರ ಗ್ರಾಮದ ಮುರಾರ್ಜಿ ವಸತಿ ಶಾಲೆಯಲ್ಲಿ ಸೋಮವಾರ 14 ಲಕ್ಷ ರೂ. ವೆಚ್ಚದಲ್ಲಿ ಎರಡು ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಕಳೆದ ವರ್ಷ ಶಾಸಕರ ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ 10ಕ್ಕೂ ಹೆಚ್ಚಿನ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಿಸಲಾಗಿದೆ. ಈ ಬಾರಿ ಮೈಸೂರು ರೌಂಡ್ ಟೇಬಲ್ ಸಂಸ್ಥೆಯಿಂದ 9 ಲಕ್ಷ ರೂ. ಹಾಗೂ ತಮ್ಮ ಶಾಸಕರ ನಿಧಿ 5 ಲಕ್ಷ ರೂ. ಅನುದಾನ ಸೇರಿ ಒಟ್ಟು 14 ಲಕ್ಷ ರೂ.ವೆಚ್ಚದಲ್ಲಿ ಎರಡು ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಸರ್ಕಾರ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧ್ದಿಗೆ ಆದ್ಯತೆ ನೀಡಿದ್ದು, ಕಾರ್ಯಕರ್ತರು ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಸರ್ಕಾರದಿಂದ ಹೆಚ್ಚಿನ ಅನುದಾನ ತರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಪರಿಶಿಷ್ಟ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ಎಚ್.ಎಸ್.ಬಿಂದ್ಯಾ, ಚಾಮುಲ್ ನಿರ್ದೇಶಕ ನಂಜುಂಡ ಪ್ರಸಾದ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮುನಿರಾಜು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಮಾಜಿ ಸದಸ್ಯ ನೀಲಕಂಠಪ್ಪ ಸೇರಿದಂತೆ ಹಲವರು ಇದ್ದರು.