ಬೀದರ್: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ 'ಜೂನಿಯರ್ ರೆಡ್ ಕ್ರಾಸ್ ಉಪ ಸಮಿತಿ'ಯ ರಾಜ್ಯ ನಿರ್ದೇಶಕರಾಗಿ ಇಲ್ಲಿಯ ಲಕ್ಷ್ಮೀಬಾಯಿ ಕಮಠಾಣೆ ಬಿ.ಎಡ್. ಕಾಲೇಜು ಪ್ರಾಚಾರ್ಯ ಡಾ. ದಿಲೀಪ್ ಕಮಠಾಣೆ ಅವರನ್ನು ನೇಮಕ ಮಾಡಲಾಗಿದೆ.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಪ್ರಧಾನ ಕಾರ್ಯದರ್ಶಿ 2025-2028 ರ ಅವಧಿಗೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ದಿಲೀಪ್ ಕಮಠಾಣೆ ಅವರು ಒಂದೂವರೆ ದಶಕದಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಆರು ವರ್ಷಗಳಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಬೀದರ್ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಲಬುರಗಿ ವಿಭಾಗದಿಂದ ಸಂಸ್ಥೆಯ ರಾಜ್ಯ ಪ್ರತಿನಿಧಿ ಕೂಡ ಆಗಿದ್ದಾರೆ.
ಕಮಠಾಣೆ ಅವರು ನಾಲ್ಕು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಕ್ಕೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಬಸವ ತತ್ವ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿದ್ದಾರೆ. ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಮೂಲಕ ಗಮನ ಸೆಳೆದಿದ್ದಾರೆ.
ಕಮಠಾಣೆ ಅವರನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜೂನಿಯರ್ ರೆಡ್ ಕ್ರಾಸ್ ಉಪ ಸಮಿತಿಯ ರಾಜ್ಯ ನಿರ್ದೇಶಕರಾಗಿ ನೇಮಕ ಮಾಡಿದ್ದಕ್ಕೆ ಸಂಸ್ಥೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿ ಅಭಿನಂದನೆ ತಿಳಿಸಿದ್ದಾರೆ.