ಪಶು ವಿವಿಗೆ ಯುವ ಮುಖಂಡ ವಿಜು ಪಾಟೀಲ ಗಾದಗಿ ನೇಮಕ

ವಿಜಯಕುಮಾರ ಪಾಟೀಲ ಗಾದಗಿ
ವಿಜಯಕುಮಾರ ಪಾಟೀಲ ಗಾದಗಿ
Published on
ಬೀದರ್: ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ಸದಸ್ಯರಾಗಿ ಇಲ್ಲಿಯ ಯುವ ಮುಖಂಡ ವಿಜಯಕುಮಾರ(ವಿಜು) ಪಾಟೀಲ ಗಾದಗಿ ಅವರನ್ನು ನೇಮಕ ಮಾಡಲಾಗಿದೆ.
ವಿಶ್ವವಿದ್ಯಾಲಯದ ಕುಲಾಧಿಪತಿಯಾದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮುಂದಿನ ಮೂರು ವರ್ಷಗಳ ಅವಧಿಗೆ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಎಂ.ಎಸ್ಸಿ ಕೃಷಿ ಪದವೀಧರರಾಗಿರುವ ವಿಜಯಕುಮಾರ ಪಾಟೀಲ ಗಾದಗಿ ಅವರು, ಎರಡು ದಶಕಗಳಿಂದ ಶಿಕ್ಷಣ, ಸಹಕಾರ, ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರೋತ್ಥಾನ ಫೌಂಡೇಷನ್ ಮೂಲಕ ಜನ ಕಲ್ಯಾಣ ಕಾರ್ಯ ಕೈಗೊಳ್ಳುತ್ತಿದ್ದಾರೆ. ಬಿಜೆಪಿಯಲ್ಲೂ ಸಕ್ರಿಯರಾಗಿದ್ದಾರೆ. ಉತ್ತಮ ಸಂಘಟಕರಾಗಿದ್ದು, ಜಿಲ್ಲೆಯಲ್ಲಿ ತಮ್ಮದೇ ಆದ ಯುವ ಪಡೆಯನ್ನು ಹೊಂದಿದ್ದಾರೆ.
ಮೂರು ಅವಧಿಗೆ ಬೀದರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾಗಿ, ಒಮ್ಮೆ ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ನಿರ್ದೇಶಕರಾಗಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ, ಯುವ ಮೋರ್ಚಾ ಬೀದರ್ ಜಿಲ್ಲಾ ಅಧ್ಯಕ್ಷರಾಗಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿದ್ದಾರೆ.
ತಮ್ಮನ್ನು ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ಸದಸ್ಯರಾಗಿ ನೇಮಕ ಮಾಡಿರುವುದು ಸಂತಸ ಉಂಟು ಮಾಡಿದೆ ಎಂದು ವಿಜಯಕುಮಾರ ಪಾಟೀಲ ಗಾದಗಿ ಪ್ರತಿಕ್ರಿಯಿಸಿದ್ದಾರೆ.
ವಿವಿಧೆಡೆ ಅಂಗ ಸಂಸ್ಥೆಗಳನ್ನು ಹೊಂದಿರುವ ವಿಶ್ವವಿದ್ಯಾಲಯ, ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ನನ್ನ ಅಧಿಕಾರ ಅವಧಿಯಲ್ಲಿ ವಿಶ್ವವಿದ್ಯಾಲಯದ ಇನ್ನೂ ಹೆಚ್ಚಿನ ಅಭಿವೃದ್ಧಿ, ವಿದ್ಯಾರ್ಥಿಗಳಿಗೆ ಅಧ್ಯಯನ ಹಾಗೂ ರೈತರಿಗೆ ವಿಶ್ವವಿದ್ಯಾಲಯದ ಸಂಶೋಧನೆಗಳ ಲಾಭ ತಲುಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದು ತಿಳಿಸಿದ್ದಾರೆ.
ವಿಜಯಕುಮಾರ ಪಾಟೀಲ ಗಾದಗಿ ಅವರ ನೇಮಕಕ್ಕೆ ಬೀದರ್ ಕೃಷಿ ಪದವೀಧರರ ಸಂಘದ ಪದಾಧಿಕಾರಿಗಳು ಸೇರಿದಂತೆ ಅನೇಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net