ಬೀದರ್: ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಅವರಿಗೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಬೇಕು ಎಂದು ಕಲಬುರಗಿ-ಬೀದರ್-ಯಾದಗಿರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷರೂ ಆದ ಹಾಲಿ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ (ಪರಿಹಾರ) ಬೇಡಿಕೆ ಮಂಡಿಸಿದ್ದಾರೆ.
ರೇವಣ್ಣ ಸಚಿವ, ಶಾಸಕರಾಗಿ ಹಿಂದೆ ಉತ್ತಮವಾಗಿ ಕೆಲಸ ಮಾಡಿದ್ದಾರೆ. ದಶಕಗಳಿಂದ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಅಚ್ಚುಕಟ್ಟಾಗಿ ಅನುಷ್ಠಾನಗೊಳ್ಳುವಂತೆ ಮಾಡಿದ್ದಾರೆ. ಜನ ಮನ್ನಣೆ ಗಳಿಸಿದ್ದಾರೆ ಎಂದು ತಿಳಿಸಿದ್ದಾರೆ.
ರೇವಣ್ಣ ಅವರು ಅನುಭವಿ, ಮುತ್ಸದ್ದಿ ರಾಜಕಾರಣಿಯಾಗಿದ್ದಾರೆ. ದೂರದೃಷ್ಟಿಯ ನೇತಾರರಲ್ಲಿ ಒಬ್ಬರಾಗಿದ್ದಾರೆ. ಸರ್ಕಾರಕ್ಕೆ ಹೊಸ ಚೈತನ್ಯ ನೀಡಲು ಸಂಪುಟಕ್ಕೆ ಅವರ ಸೇರ್ಪಡೆ ಅವಶ್ಯಕವಾಗಿದೆ ಎಂದು ಹೇಳಿದ್ದಾರೆ.
ಕುರುಬ ಸಮಾಜದ ಹಿರಿಯ ಮುಖಂಡರಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರು ನಿರ್ಗಮಿಸಿರುವುದರಿಂದ ಸರ್ಕಾರ ಮಟ್ಟದಲ್ಲಿ ಸಮುದಾಯದ ಪ್ರಾತಿನಿಧ್ಯ ಕಡಿಮೆಯಾಗಿದೆ. ಅದನ್ನು ಸರಿದೂಗಿಸಲು ರೇವಣ್ಣ ಅವರಿಗೆ ಸಚಿವ ಸ್ಥಾನ ಕೊಡಬೇಕು. ಇದರಿಂದ 2028 ರ ವಿಧಾನಭೆ ಚುನಾವಣೆಯಲ್ಲಿ ಪಕ್ಷ ಮತ್ತೆ ಗೆಲ್ಲಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.